ಹುಬ್ಬಳ್ಳಿ: ಅವೈಜ್ಞಾನಿಕ ವಿದ್ಯುತ್ ದರ ಏರಿಕೆ ಖಂಡಿಸಿ ವಿವಿಧ ಸಂಘ-ಸಂಸ್ಥೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಹುಬ್ಬಳ್ಳಿಯ ಕೆಸಿಸಿಐ ಕಚೇರಿ ಮುಂದೆ ಸಭೆ ಸೇರಿದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಜವಳಿ ಮತ್ತು ಕ್ಲಾಥ್ ಮರ್ಚೆಂಟ್ಸ್ ಅಸೋಸಿಯೇಷನ್, ಹು-ಧಾ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್, ಜುವೆಲರ್ಸ್ ಅಸೋಸಿಯೇಷನ್, ಹು-ಧಾ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್, ಸಣ್ಣ ಕೈಗಾರಿಕೆಗಳ ಸಂಘ, ಹೋಟೆಲ್ ಉದ್ಯಮಿಗಳ ಸಂಘ, ಎಪಿಎಂಸಿ ವರ್ತಕರ ಸಂಘ ಸೇರಿ ಅನೇಕ ಸಂಘ-ಸಂಸ್ಥೆಗಳು, ಪ್ರತಿಭಟನಾ ಮೆರವಣಿಗೆ ನಡೆಸಿದವು. ಬಹಳಷ್ಟು ಉದ್ಯಮಿಗಳು, ವ್ಯಾಪಾರಿಗಳು ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರಿಂದ ಮಾರುಕಟ್ಟೆಗಳು ಬಿಕೋ ಎನ್ನುತ್ತಿದ್ದವು. ಬೀದಿ ಬದಿ ವ್ಯಾಪಾರಿಗಳು ಎಂದಿನಂತೆ ತಮ್ಮ ವ್ಯಾಪಾರ-ವಹಿವಾಟು ಮುಂದುವರಿಸಿದ್ದರು. ಬಸ್, ಆಟೋರಿಕ್ಷಾ, ಇತರ ವಾಹನಗಳ ಓಡಾಟ ಸಾಮಾನ್ಯವಾಗಿತ್ತು.