ಜಿಲ್ಲೆ

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ನಡುವೆ ಪ್ರಧಾನಿ ಮೋದಿ ಭೇಟಿಯಾದ ಬಿ.ವೈ. ವಿಜಯೇಂದ್ರ! B Y Vijayendra

B Y Vijayendra : ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿರುವ ನಡುವೆಯೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ದೆಹಲಿಗೆ ಭೇಟಿಗೆ ನೀಡಿರುವ ವಿಜಯೇಂದ್ರ ಇಂದು (ಡಿ.18) ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ವಿಜಯೇಂದ್ರ, ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು ಎಂದಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ, ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು. ಮಾನ್ಯ ಪ್ರಧಾನಿ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ವಿಜಯೇಂದ್ರ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ರಾಜ್ಯ ಬಿಜೆಪಿಯಲ್ಲಿ ಕೆಲ ದಿನಗಳಿಂದ ಬಣ ರಾಜಕೀಯ ಜೋರಾಗಿದ್ದು, ಇದರ ನಡುವೆಯೇ ವಿಜಯೇಂದ್ರ ಅವರು ಭೇಟಿ ಮಾಡಿರುವುದು ವಿಶೇಷ ಗಮನ ಸೆಳೆದಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರು ಬಹಿರಂಗವಾಗಿಯೇ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ನಿರಂತರವಾಗಿ ಮಾತನಾಡುತ್ತಿದ್ದಾರೆ. ಅಲ್ಲದೆ, ಯತ್ನಾಳ್​ ಅವರ ಬಣ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಹೈಕಮಾಂಡ್​ ಸ್ಪಷ್ಟನೆ ಕೇಳಿ ನೋಟಿಸ್​ ಸಹ ನೀಡಿತು. ದೆಹಲಿಗೆ ತೆರಳಿ ಸ್ಪಷ್ಟನೆ ನೀಡಿ ಬಂದಿದ್ದಾರೆ. ಆದರೂ ಬಿಎಸ್​ವೈ ಕುಟುಂಬದ ವಿರುದ್ಧ ಮಾತನಾಡುವುದನ್ನು ಯತ್ನಾಳ್​ ನಿಲ್ಲಿಸಿಲ್ಲ.

ಬಣ ರಾಜಕೀಯದ ನಡುವೆ ವಿಜಯೇಂದ್ರ ವಿರುದ್ಧ 150 ಕೋಟಿ ರೂ. ಲಂಚದ ಆರೋಪ ಸಹ ಕೇಳಿಬಂದಿದೆ. ವಕ್ಫ್​ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಲಂಚದ ಆಮಿಷವೊಡ್ಡಿದ್ದರು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ನೀಡಿದ್ದಾರೆನ್ನಲಾದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಯಿತು. ಆದರೆ, ಈ ಆರೋಪವನ್ನು ವಿಜಯೇಂದ್ರ ನಿರಾಕರಿಸಿದ್ದರೆ. ಇತ್ತ ಕಾಂಗ್ರೆಸ್​ ನಾಯಕರು ಆಡಿಯೋ ಬಿಡುಗಡೆ ಮಾಡುವ ಮೂಲಕ ವಿಜಯೇಂದ್ರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಈ ಎಲ್ಲ ಬೆಳವಣಿಗಳ ನಡುವೆ ವಿಜಯೇಂದ್ರ ಅವರು ಪ್ರಧಾನಿ ಮೋದಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.