ಜಿಲ್ಲೆ

ಪುತ್ತೂರಿಗೆ ವೈದ್ಯಕೀಯ ಕಾಲೇಜು, ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್; ಕರಾವಳಿಯ 2 ಪ್ರಮುಖ ಭರವಸೆ, ಕೃಷಿಕರಿಗೆ ನಿರಾಸೆ !

Mangaluru - Prakash MC Manjeshwar

ವಿಜಯವಾಣಿ ಸುದ್ದಿಜಾಲ ಮಂಗಳೂರು

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಇಲ್ಲಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸುವುದು, ಕಡಲ್ಕೊರೆತ ತಡೆಗೆ ಚೆನ್ನೈ ಐಐಟಿ ತಯಾರಿಸಿದ ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ ಅನುಷ್ಠಾನಕ್ಕೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಡಿಪಿಆರ್ (ಸಮಗ್ರ ಯೋಜನಾ ವರದಿ) ಸಿದ್ಧಪಡಿಸುವುದು. ಕಿಯೋನಿಕ್ಸ್ ವತಿಯಿಂದ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪನೆ...

ಇವು ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಕರಾವಳಿಗೆ ದೊರೆತ ಪ್ರಮುಖ ಕೊಡುಗೆಗಳು.

ಕೃಷಿಕರ ಅವಗಣನೆ !

ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ ಬಜೆಟ್‌ನಲ್ಲಿ 62 ಕೋಟಿ ರೂ. ಒದಗಿಸಲಾಗಿದೆ. ಇದೇ ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗದ ಸಮಸ್ಯೆಯ ತೀವ್ರತೆಯಿಂದ ಕರಾವಳಿ ಭಾಗದ ರೈತರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ದು, ಈ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ.

ಒಂಭತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಿರುವ ರಾಜ್ಯದ ಏಕೈಕ ಜಿಲ್ಲೆ ಎನ್ನುವ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎನ್ನುವುದು ಹಲವು ದಶಕಗಳ ಬೇಡಿಕೆ. ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಆಸ್ಪತ್ರೆ ಉನ್ನತೀಕರಿಸಲು ಅನುದಾನ ನಿಗದಿಪಡಿಸಿಲ್ಲ !

ಮೀನುಗಾರಿಕೆಗೆ ಭರವಸೆ

ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿ ರೂಪಿಸುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವಿದೆ.

ಮಂಗಳೂರಿನ ಮೀನುಗಾರಿಕಾ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣಗೊಳಿಸುವುದಾಗಿ ಬಜೆಟ್ ತಿಳಿಸಿದೆ. ಇದು ಸಾಕಾರವಾದರೆ ಮಂಗಳೂರು ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಮೇಲ್ದರ್ಜೆಗೇರಿಸುವ ಕನಸು ನನಸಾಗಬಹುದು.

ಕರಾವಳಿ ಜಿಲ್ಲೆಗಳಲ್ಲಿ 200 ಕೋಟಿ ರೂ ವೆಚ್ಚದಲ್ಲಿ ಸಮುದ್ರ ಕೊರೆತ ತಡೆಯುವುದು ಸರ್ಕಾರದ ಉದ್ದೇಶ. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ಮೀನುಗಾರಿಕೆ ಸಂಬಂಧಿಸಿ ಸರ್ಕಾರದ ಪ್ರಮುಖ ಆಶ್ವಾಸನೆ.

ಪ್ರಾಕೃತಿಕ ವಿಪತ್ತು ನಿರ್ವಹಣೆ

ದಕ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 200 ಕೋಟಿ ರೂ ವೆಚ್ಚದಲ್ಲಿ ಭೂ ಕುಸಿತ ತಡೆಯಲು ಅಗತ್ಯ ಯೋಜನೆ ರೂಪಿಸುವ ಉದ್ದೇಶವಿರಿಸಲಾಗಿದೆ. ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ ವೆಚ್ಚ ಮಾಡಲು ಉದ್ದೇಶಿಸಿರುವುದು.

-------

ಮತ್ತಷ್ಟು ಘೋಷಣೆ

*ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ನವೀಕರಣಕ್ಕೆ ಅನುದಾನ.

* ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ 2 ಕೋಟಿ ರೂ.

* ದಕ ಮತ್ತು ಉಡುಪಿ ಜಿಲ್ಲೆಗಳ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ (ಒಟ್ಟು 6 ಕೋಟಿ ರೂ) ಒದಗಿಸುವುದು.

* ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ ವಿಶೇಷ ಪ್ಯಾಕೇಜ್.

* ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಸ್ಥಾಪನೆ.

* ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.

* ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು

30 ಕೋಟಿ ರೂ. ಒದಗಿಸಲಾಗುವುದು.

* ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ.

* ನೇತ್ರಾವತಿ ನದಿಗೆ ಅಡ್ಡಲಾಗಿ ಎರಡು ಸೇತುವೆ ನಿರ್ಮಾಣ