ಮೈಸೂರು: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಸಿದ್ಧಾರ್ಥನಗರ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಕ್ಕೊತ್ತಾಯ ಮಂಡಿಸಿದರು. ದೇಶದ ವಿವಿಧ ಭಾಗಗಳಿಂದ ರಾಜ್ಯಕ್ಕೆ ವಲಸಿಗರು ಬಂದು ನೆಲೆಸಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನಂತಹ ಮಹಾನಗರದಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ. ಇದರಿಂದ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಬೇಕು ಎಂಬುದು ಹಲವು ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ. ಖಾಸಗಿ ಸಂಸ್ಥೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೇರೆ ರಾಜ್ಯದವರನ್ನು ನೇಮಿಸಿಕೊಳ್ಳುತ್ತಿವೆ. 2019ರಲ್ಲಿ ಕಾರ್ಮಿಕ ಇಲಾಖೆ ಮೂಲಕ ನಿಯಮಗಳಿಗೆ ಬದಲಾವಣೆ ತಂದು ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಸೂಚಿಸಿದ್ದರೂ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ವಿಚಾರದಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆಗ್ರಹಿಸಿದರು.
ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ-1946ರ ಅನ್ವಯ ರಾಜ್ಯ ಸರ್ಕಾರವು ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕು. ಎಲ್ಲ ಖಾಸಗಿ ಸಂಸ್ಥೆಯ ಸಿ, ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100 ಉದ್ಯೋಗವನ್ನು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ.80 ಅವಕಾಶ ಕೊಡಬೇಕು. 15 ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿರುವ ಜನರನ್ನು ಕನ್ನಡಿಗರು ಎಂದು ಪರಿಗಣಿಸುವ ನಿಯಮವನ್ನು ಬದಲಿಸಬೇಕು. ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ ಅದರಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಕನ್ನಡಿಗರು ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ ಅವುಗಳಿಗೆ ಕೊಟ್ಟಿರುವ ಭೂಮಿ, ವಿವಿಧ ಸೌಲಭ್ಯವನ್ನು ವಾಪಸ್ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ಸಿ, ಡಿ ದರ್ಜೆ ಹುದ್ದೆಗಳಿಗೆ ಕನ್ನಡಿಗರಿಗೆ ಶೇ.100 ಮೀಸಲಾತಿ ನೀಡಬೇಕು.
ಈ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಮುಖಂಡರಾದ ಲೋಕೇಶ್, ಶ್ರೀನಿವಾಸ್, ಶಿವು, ಸುನೀಲ್, ಹೇಮಂತಗೌಡ, ಮೋಹನ್‌ಕುಮಾರಿ, ಪುಷ್ಪಲತಾ ಇನ್ನಿತರರಿದ್ದರು.