ಮಂಡ್ಯ: ಕನ್ನಡಿಗರನ್ನು ಪ್ರತಿನಿಧಿಸುವ ಕನ್ನಡ ಸಾಹಿತ್ಯ ಪರಿಷತ್ತನ್ನು ಅಧಿಕಾರಿಗಳು ಹಗುರವಾಗಿ ಕಾಣಬಾರದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಸಾಪದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಮಾರಂಭಕ್ಕೆ ಆಹ್ವಾನಿತರಾಗಿರುವ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಎಸಿ ಸೇರಿದಂತೆ ಹಲವು ಅಧಿಕಾರಿಗಳು ಗೈರು ಹಾಜರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಮಹಾತ್ಮಗಾಂಧಿ ಅವರಿಂದ ರಾಜರ್ಷಿ ಎಂದು ಕರೆಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಆದರ್ಶ ಋಷಿಯಾಗಿ, ಆಧ್ಯಾತ್ಮಿಕ ನೆಲೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ, ಮಿರ್ಜಾ ಇಸ್ಮಾಯಿಲ್ ನೇತೃತ್ವದಲ್ಲಿ ಸ್ಥಾಪಿಸಿದ ಕಸಾಪಗೆ ತನ್ನದೇ ಆದ ಘನತೆ, ಗೌರವ ವಿಶ್ವಾಸವಿದೆ. ಕನ್ನಡಿಗರು ನಮ್ಮ ಪರಿಷತ್ತು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಪ್ರಮುಖ ಸಂಸ್ಥೆ. ಡಿ.ದೇವರಾಜ ಅರಸು ಅವರು ಸಿಎಂ ಆಗಿದ್ದಾಗ ಪರಿಷತ್ತಿನ ಅಧ್ಯಕ್ಷರು ಭೇಟಿಯಾಗಲು ಬಯಸಿದಾಗ ತಮ್ಮದೇ ವಾಹನವನ್ನು ಕಳಿಸಿ ಕರೆಸಿಕೊಂಡು ತಾವೇ ಬಾಗಿಲಲ್ಲಿ ನಿಂತು ಸ್ವಾಗತಿಸಿರುವ ಉದಾಹರಣೆ ಇದೆ. ಇಂತಹ ಸಂಸ್ಥೆಯನ್ನು ಅಧಿಕಾರಿಗಳು ಗೌರವಿಸಬೇಕು. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೌರವ ಕೊಟ್ಟು ಬರುವಂತಿರಬೇಕು. ಮುಂದೆ ಈ ರೀತಿ ಆಗದಂತೆ ಗಮನಹರಿಸಬೇಕು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣದಿಂದ ಮುಕ್ತಿ, ಸಂಘದಿಂದ ಶಕ್ತಿ ಎಂಬ ಮಂತ್ರ ವಾಕ್ಯದಡಿ ಕಸಾಪ ಪ್ರತಿಭೆಗಳನ್ನು ಅಭಿನಂದಿಸುತ್ತಿದೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಪ್ರೇರಕರಾದ ಶಿಕ್ಷಕರಿಗೆ, ಪಾಲಕರಿಗೆ ಅಭಿನಂದನೆಗಳನ್ನು ತಿಳಿಸಿದರು.
ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜೇಗೌಡ, ಉದಯ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಕದಲೂರು ಉದಯ್, ಜೆಡಿಎಸ್ ಮುಖಂಡ ಮಹಾಲಿಂಗೇಗೌಡ ಮುದ್ದನಘಟ್ಟ ಮಾತನಾಡಿದರು. ಡಿಡಿಪಿಐ ಎಸ್.ಟಿ.ಜವರೇಗೌಡ, ಅರಮನೆ ಶಂಕರ ಸೇವಾ ಪ್ರತಿಷ್ಠಾನದ ಅರಮನೆ ಶಂಕರ್, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ಕಾರ್ಯದರ್ಶಿಗಳಾದ ಧನಂಜಯ ದರಸಗುಪ್ಪೆ, ಹುಸ್ಕೂರು ಕೃಷ್ಣೇಗೌಡ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ನಗರಾಧ್ಯಕ್ಷೆ ಸುಜಾತಾ ಕೃಷ್ಣ ಇತರರಿದ್ದರು.
ಇದೇ ವೇಳೆ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಗಳಿಸಿದ 375 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ.100ರಷ್ಟು ಫಲಿತಾಂಶ ಪಡೆದ ಪ್ರೌಢಶಾಲೆಗಳ 208 ಮುಖ್ಯ ಶಿಕ್ಷಕರನ್ನು ಅಭಿನಂದಿಸಲಾಯಿತು.