ಹನೂರು - ಬಂಡಳ್ಳಿ ಮಾರ್ಗದಲ್ಲಿ ನಿರ್ಮಾಣವಾಗಿದ್ದ ಗುಂಡಿಗಳಿಗೆ ಸಾರ್ವಜನಿಕರೇ ಮಣ್ಣು ಹಾಕುತ್ತಿರುವುದು. 
ಜಿಲ್ಲೆ

ಬಂಡಳ್ಳಿ-ಶಾಗ್ಯ ಮಾರ್ಗಕ್ಕೆ ಸಾರ್ವಜನಿಕರಿಂದ ಕಾಯಕಲ್ಪ

ಹನೂರು: ಪಟ್ಟಣದಿಂದ ಬಂಡಳ್ಳಿ-ಶಾಗ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹದಗೆಟ್ಟ ರಸ್ತೆಗೆ ಗುರುವಾರ ಸಾರ್ವಜನಿಕರೇ ಮಣ್ಣು ಹಾಕುವ ಮೂಲಕ ಗುಂಡಿಗಳನ್ನು ಮುಚ್ಚಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಾರ್ಗದ ಬಹುತೇಕ ಕಡೆಗಳಲ್ಲಿ ಗುಂಡಿ ನಿರ್ಮಾಣವಾಗಿದ್ದು, ಸಂಪೂರ್ಣ ಹದಗೆಟ್ಟಿತ್ತು. ಇದರಿಂದ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡಬೇಕಿತ್ತು. ಅಲ್ಲದೆ ಬೈಕ್ ಸವಾರರು ಆಗಾಗ್ಗೆ ಗುಂಡಿಗಳನ್ನು ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಜತೆಗೆ ಕೆಲ ತಿಂಗಳ ಹಿಂದೆ ಗರ್ಭೀಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ 108 ತುರ್ತು ವಾಹನದಲ್ಲಿ ಮಗುವಿಗೆ ಜನ್ಮ ನೀಡಿದ್ದರು.

ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಭಾಗದ ಜನರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಸಾರ್ವಜನಿಕರು ಜೆಸಿಬಿ ಮೂಲಕ ಗುಂಡಿಗಳಿಗೆ ಮಣ್ಣು ಹಾಕಿಸಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಿಮ್ಮ ಬಂಡಳ್ಳಿ ಫೇಸ್‌ಬುಕ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.