ಬೆಂಗಳೂರು ಗ್ರಾಮಾಂತರ: ಸರ್ಕಾರದ ಅನುದಾನ ಪಡೆದು ಮಹಿಳೆ, ಮಕ್ಕಳು, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಸರ್ಕಾರೇತರ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಅಧಿಕಾರಿಗಳು ನಿರಂತರ ಪರಿಶೀಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಅ. ಜೊಲ್ಲೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸರ್ಕಾರದಿಂದ ಇಂಥಹವರ ಕಲ್ಯಾಣಕ್ಕಾಗಿ ಸರ್ಕಾರೇತರ ಸಂಸ್ಥೆಗಳಿಗೆ ಇಲಾಖೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತದೆ. ಇದು ಸಮರ್ಪಕವಾಗಿ ಬಳಕೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅಧಿಕಾರಿಗಳು ಕಚೇರಿ ಕೆಲಸಕ್ಕಷ್ಟೆ ಸೀಮಿತವಾಗವಾರದು, ಹೆಚ್ಚಾಗಿ ಕ್ಷೇತ್ರ ಪ್ರವಾಸ ಕೈಗೊಳ್ಳಬೇಕು. ಸರ್ಕಾರೇತರ ಸಂಸ್ಥೆಗಳ ಮೂಲಕ ಅಥವಾ ವೈಯಕ್ತಿಕ ಸೌಲಭ್ಯ ಯೋಜನೆಯಲ್ಲಿ ಅನುದಾನ ಮತ್ತು ಸೌಲಭ್ಯ ಪಡೆದಿರುವವರ ಪ್ರಗತಿ ಮಾಹಿತಿ ಕಲೆಹಾಕಲು ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲಿಸಬೇಕು ಎಂದು ಸಚಿವೆ ತಾಕೀತು ಮಾಡಿದರು.
ಸೋರಿಕೆ ತಡೆಗಟ್ಟಲು ಚಿಂತನೆ:ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಪರಿಣಿತರೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಆಹಾರ ವಿತರಣೆಯಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ, ಹೊಸದಾಗಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಮಕ್ಕಳು ಹಾಗೂ ಪಾಲಕರನ್ನು ಆಕರ್ಷಿಸುವಂತೆ ಅಂಗನವಾಡಿ ಕಟ್ಟಡ ಮಾರ್ಪಡಿಸಲು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಸಚಿವರು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ಗಳನ್ನು ನೀಡಲಾಗುತ್ತಿದ್ದು, ಅಂಗನವಾಡಿ ಮಾಹಿತಿ ಸಂಗ್ರಹವನ್ನು ಡಿಜಿಟಲೀಕರಣಗೊಳಿಸುವ ಮೂಲಕ ಆಹಾರ ಸೋರಿಕೆ ತಡೆಗಟ್ಟಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ದಮನಿತ ಮಹಿಳೆಯರು, ಎಚ್‌ಐವಿ ಸೋಂಕಿತ ಮಹಿಳೆಯರು, ತೃತೀಯ ಲಿಂಗಿಗಳು ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಗೌರವಯುತ ಜೀವನ ರೂಪಿಸಿಕೊಳ್ಳಲು ಸರ್ಕಾರದಿಂದ ಸಹಾಯಸ್ತ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಾಳಿ, ಜಿಪಂ ಅಧ್ಯಕ್ಷೆ ಜಯಮ್ಮ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ, ಶಾಸಕ ಶರತ್‌ಬಚ್ಚೇಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪಾ ಜಿ.ರಾಯರ್ ಮತ್ತಿತರರು ಇದ್ದರು.