ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 10 ಎಕರೆ ಜಮೀನು ಮಂಜೂರಾಗಿದ್ದು, ಕೆಂಪೇಗೌಡರ ಜೀವನಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸ್ಮಾರಕ, ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಿದ್ದು ಶೀಘ್ರ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ವಿಶ್ವದಲ್ಲಿ ಹೆಸರು ಮಾಡಲು ಸಹಕಾರಿಯಾಗಿದೆ. ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ರಾಜ್ಯದ ಜನರ ಆಸಿಯಾಗಿದ್ದು ಅವರ ಮೂಲಸ್ಥಾನವಾದ ದೇವನಹಳ್ಳಿಯ ಆವತಿ ಗ್ರಾಮದ ವ್ಯಾಪ್ತಿಯಲ್ಲಿ ಸ್ಮಾರಕ, ಸಂಗ್ರಹಾಲಯ ನಿರ್ಮಾಣಕ್ಕೆ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಶಿಕ್ಷಣಕ್ಕೆ ಒತ್ತು:ಕೆಂಪೇಗೌಡರ ತತ್ವ-ಸಿದ್ಧಾಂತ ಹಾಗೂ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಂಪೇಗೌಡರ ಅಭಿವೃದ್ಧಿಯ ದೂರದೃಷ್ಟಿಯಂತೆ ನಮ್ಮ ಗ್ರಾಮಾಂತರ ಜಿಲ್ಲೆಯಲ್ಲಿಯೂ ಕೆರೆಗಳ ಅಭಿವೃದ್ಧಿ, ಶಾಲೆಗಳ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುವುದು ಎಂದರು. ಈಗಾಗಲೇ ಸಿಎಸ್‌ಆರ್ ಅನುದಾನದಡಿ ಶಾಲೆಗಳ ನವೀಕರಣ ಮತ್ತು ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿಯ ಶಾಲೆಯನ್ನು ಗುಣಮಟ್ಟದ ಶಿಕ್ಷಣದೊಂದಿಗೆ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಹೇಳಿದರು.
ದೂರದೃಷ್ಟಿ ನಾಯಕ:ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು.ಎಲ್ಲ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿ ಆಡಳಿತ ವೈಖರಿ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದರು. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆಗಳ ಫಲ ಎಂದು ಹೇಳಿದರು.
ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ:ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ, ಸಮಾಜ ಸೇವಾ ಗುಣ, ಜೀವನಾದರ್ಶವನ್ನು ನಾವೆಲ್ಲರೂ ರೂಡಿಸಿಕೊಳ್ಳುವ ಜತೆಯಲ್ಲಿ ನಮ್ಮೆಲ್ಲರ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ಮುಂದಿನ ನೂರಾರು ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ನೂರಾರು ಕೆರೆಗಳು-ಕಾಲುವೆ, ಪೇಟೆಗಳನ್ನು ನಿರ್ಮಿಸಿ, ಜನರ ಜೀವನವನ್ನು ರೂಪಿಸಿಕೊಳ್ಳಲು ಬೆಂಗಳೂರು ಮಹಾನಗರವನ್ನು ಕಟ್ಟಿದರು. ಇಂದು ಲಕ್ಷಾಂತರ ಜನರ ಹೊಟ್ಟೆ-ಬಟ್ಟೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
-