ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ.27ರಂದು ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಕಲಾತಂಡದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಹೊರಟು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ ತಲುಪಲಿದೆ. 11ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ತಮಗೆ ವಹಿಸಿರುವ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಎಲ್ಲ ಅಧಿಕಾರಿಗಳು ಅಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಅಂದು ಸಂಜೆ 5 ಗಂಟೆಗೆ ಕೆಂಪೇಗೌಡರ ಕುರಿತು ಜಯರಾಂ ರಾಯಪುರ ವಿರಚಿತ ಸಿರಿಗೆ ಸೆರೆ ನಾಟಕ ಪ್ರದರ್ಶನವನ್ನು ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಉದಯ್ಕುಮಾರ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ, ನೇಗಿಲಯೋಗಿ ಟ್ರಸ್ಟ್ ಅಧ್ಯಕ್ಷ ರಮೇಶ್ ಇತರರಿದ್ದರು.