ಚನ್ನರಾಯಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರನ್ನು ಶಾಸಕ ಸಿ.ಎನ್.ಬಾಲಕೃಷ್ಣ ಸನ್ಮಾನಿಸಿದರು. ಡಾ.ವಾದಿರಾಜ ಕಲ್ಲೂರಾಯ, ಸಿ.ಎನ್.ಮೋಹನ್, ಜಿ.ಎಸ್.ಶಂಕರಪ್ಪ, ಎಸ್.ಎ.ಗಣೇಶ್, ಜಿ.ಆರ್.ಹರೀಶ್ ಇತರರು ಇದ್ದರು. 
ಜಿಲ್ಲೆ

ಗುರು ಇಲ್ಲದೆ ಅರಿವು ಅಸಾಧ್ಯ

ಮಾದೇಶ್ ತಿ.ನರಸೀಪುರ

ಚನ್ನರಾಯಪಟ್ಟಣ: ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕನ ಪಾತ್ರ ಅತ್ಯಂತ ಮಹತ್ವವಾದದ್ದು. ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಜ್ಞಾನಜ್ಯೋತಿ ಪ್ರಶಸ್ತಿ ಪುರಸ್ಕೃತ ಡಾ.ವಾದಿರಾಜ್ ಕಲ್ಲೂರಾಯ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನ ಬದುಕಿನ ಶ್ರೇಯಸ್ಸಿಗೆ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಗುರು ಇಲ್ಲದೆ ಅರಿವು ಅಸಾಧ್ಯ ಎಂದು ತಿಳಿಸಿದರು.

ಹಿಂದೆ ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳ ಶಿಕ್ಷಣದ ಅವಶ್ಯಕತೆ ಇರಲಿಲ್ಲ. ಏಕೆಂದರೆ ಅಂದಿನ ಶಿಕ್ಷಣ ಹಾಗೂ ಶಿಕ್ಷಕರು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಆದರೆ ಇಂದು ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳನ್ನು ಬೋಧಿಸುವುದು ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ, ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಹೆಚ್ಚಾಗಿ ಕೌಶಲ ಆಧಾರಿತವಾಗಿದೆ. ಗುಣಾತ್ಮಕ ಶಿಕ್ಷಣದ ಜತೆಗೆ ಹೃದಯವಂತಿಕೆ ಕಲಿಸುವ ನೈತಿಕ ಶಿಕ್ಷಣ ಇಂದಿನ ಅಗತ್ಯವಾಗಿದೆ. ಶಿಕ್ಷಣ ಮನುಷ್ಯನ ಬುದ್ಧಿವಂತಿಕೆ ಹೆಚ್ಚಿಸುತ್ತದೆ. ಕೇವಲ ಬುದ್ಧಿವಂತಿಕೆ ಇದ್ದರೆ ಸಾಲದು. ಹೃದಯವಂತಿಕೆ ನಮ್ಮ ವ್ಯಕ್ತಿತ್ವದ ಭಾಗ ಆಗಬೇಕಾದರೆ ನೈತಿಕ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕ ವೃತ್ತಿ ಸಾಮಾನ್ಯ ವೃತ್ತಿಯಾಗಿರದೆ ಶ್ರೇಷ್ಠ ವೃತ್ತಿಯಾಗಿದೆ. ವಿದ್ಯಾರ್ಥಿಗಳನ್ನು ಸುಂದರ ಮೂರ್ತಿಗಳನ್ನಾಗಿ ರೂಪಿಸುವ ಶಿಲ್ಪಿಯಾದ ಶಿಕ್ಷಕರು ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊಂದಿರುತ್ತಾರೆ. ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರತಿ ಸಾಧಕನ ಹಿಂದೆ ಶಿಕ್ಷಕರು ಇರುತ್ತಾರೆ. ಗುರುವಿನ ಮಾರ್ಗದರ್ಶನವಿಲ್ಲದೆ ಯಾವುದೇ ಸಾಧನೆ ಅಸಾಧ್ಯ, ಸಾಮಾನ್ಯ ಶಿಕ್ಷಕರಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ದೇಶದ ಅತ್ಯುನ್ನತ ರಾಷ್ಟ್ರಪತಿ ಸ್ಥಾನಕ್ಕೇರಲು ದೇಶದ ಸಂಸ್ಕೃತಿಯೇ ಕಾರಣವಾಗಿತ್ತು. ಭವಿಷ್ಯದ ಮುಂದಿನ ಪೀಳಿಗೆಯನ್ನು ರೂಪಿಸುವಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಹೊಣೆ ದೊಡ್ಡದಾಗಿದೆ ಎಂದರು.

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ, ಕ್ಷೇತ್ರ ಸಮನ್ವಯ ಅಧಿಕಾರಿ ಕೆ.ಎನ್.ಅನಿಲ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಟಿ.ಆನಂದ್, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಉಪಾಧ್ಯಕ್ಷೆ ಕವಿತಾ ರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ.ಗಣೇಶ್, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್, ಟಿಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್.ಅನಿಲ್ ಕುಮಾರ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಂ.ಪಿ. ಪ್ರಕಾಶ್ ಗೌಡ, ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಜಿ. ಆರ್.ಮೂರ್ತಿ, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಎನ್. ವೆಂಕಟೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಆರ್. ಮಂಜುನಾಥ್ ಇತರರು ಇದ್ದರು.