ಜಿಲ್ಲೆ

ಸಿದ್ದಾಪುರ ಗ್ರಾಮ ಪಂಚಾಯಿತಿ ವಿರುದ್ಧ ಸಿಪಿಎಂ ಪ್ರತಿಭಟನೆ

ಸಿದ್ದಾಪುರ: ಆಡಳಿತ ಮಂಡಳಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ಸಿದ್ದಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಮಾರುಕಟ್ಟೆ ಬಳಿ ಇರುವ ಪಕ್ಷದ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಗ್ರಾಪಂ ಕಚೇರಿ ಮುಂದೆ ಸೇರಿ ಗ್ರಾಪಂ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಪಿಡಿಓ ಬರಬೇಕೆಂದು ಒತ್ತಾಯಿಸಿ ೧ ಗಂಟೆಗಳ ಕಾಲ ಪಂಚಾಯಿತಿ ಕಚೇರಿ ಮುಂದೆ ಧರಣಿ ಕುಳಿತು ಘೋಷಣೆ ಕೂಗಿದರು. ಬಳಿಕ ಆಗಮಿಸಿದ ಪಿಡಿಓ ಮನಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಹಾಲಿ ಆಡಳಿತ ಮಂಡಳಿ ಅಧಿಕಾರಕ್ಕೇರಿ ಒಂದೂವರೆ ವರ್ಷ ಕಳೆದರೂ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ. ನಿವೇಶನಕ್ಕಾಗಿ ಹೋರಾಟ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಿಯಮ ಮೀರಿ ದೊಡ್ಡ ಮೊತ್ತದ ಕಾಮಗಾರಿಗಳನ್ನು ಟೆಂಡರ್ ಬೇಕಾದ ಗುತ್ತಿಗೆದಾರರಿಗೆ ನೀಡುತ್ತಿದ್ದಾರೆ ಎಂದು ದೂರಿ ದರು.

ಕೆಲವು ಸದಸ್ಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕೆಲ ಸದಸ್ಯರು ಪಾನಮತ್ತರಾಗಿ ಸಭೆಗಳಲ್ಲಿ ಹಾಜರಾಗುವ ಮೂಲಕ ಸಭೆಯ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಎನ್.ಡಿ. ಕುಟ್ಟಪ್ಪನ್, ಅನಿಲ್ ಕುಟ್ಟಪ್ಪನ್, ಸಿ.ಯು ಮುಸ್ತಫ, ಬೈಜು ಮತ್ತಿತರರು ಇದ್ದರು.