ಸರ್ಕಾರದ ಮಹತ್ವಾಕಾಂಕ್ಷಿ ಅಕ್ಕ ಪಡೆಯನ್ನು ವಾಹನ ಸಂಚಾರಕ್ಕೆ ಚಾಲನೆ ನೀಡುವ ಮೂಲಕ ಎಸ್.ಪಿ. ಆರ್.ಎನ್. ಬಿಂದುಮಣಿ ಉದ್ಘಾಟಿಸಿದರು. ಬಾರಿಕೆ ದಿನೇಶ್ ಕುಮಾರ್, ಪ್ರಸನ್ನಕುಮಾರ್ ಮತ್ತಿತರರು ಇದ್ದರು.
ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಪ್ರಮುಖ ಉದ್ದೇಶದಿಂದ ರಚನೆಯಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅಕ್ಕ ಪಡೆಗೆ ಸೋಮವಾರ ಕೊಡಗಿನಲ್ಲೂ ಚಾಲನೆ ನೀಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅಕ್ಕಪಡೆಯ ವಾಹನ ಸಂಚಾರವನ್ನು ಮಡಿಕೇರಿಯಲ್ಲಿ ಎಸ್‌ಪಿ ಕಚೇರಿ ಆವರಣದಲ್ಲಿ ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಸನ್ನ ಕುಮಾರ್, ಹೆಚ್ಚವರಿ ಎಸ್.ಪಿ. ಬಾರಿಕೆ ದಿನೇಶ್ ಕುಮಾರ್, ಪೊಲೀಸ್ ಅಧಿಕಾರಿಗಳು, ಗೃಹ ರಕ್ಷಕ ದಳದ ಸಿಬ್ಬಂದಿ, ಪೊಲೀಸ್ ಕುಟುಂಬ, ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಈ ಸಂದರ್ಭ ಇದ್ದರು.
ಅಕ್ಕ ಪಡೆಯ ಬಗ್ಗೆ ಈ ವೇಳೆ ಮಾಹಿತಿ ನೀಡಿದ ಅಧಿಕಾರಿಗಳು, ಗೃಹ ಇಲಾಖೆಯಿಂದ ಬೀದರ್ ಜಿಲ್ಲೆಯಲ್ಲಿ ರಚಿಸಲ್ಪಟ್ಟ ಅಕ್ಕ ಪಡೆ ಯಶಸ್ಸನ್ನು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ರಾಜ್ಯ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ಅಕ್ಕ ಪಡೆ ರಚಿಸಿ, ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿದೆ.
ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಹಾಗೂ ರಕ್ಷಣೆ ಒದಗಿಸುವುದು, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣವನ್ನು ಉತ್ತೇಜಿಸುವುದು,
ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವುದು,
ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಅಕ್ಕ ಪಡೆ ರಚನೆಯ ಇತರ ಉದ್ದೇಶಗಳಾಗಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಕ್ಕ ಪಡೆಯ ಪರಿಶೀಲನಾ ಸಮಿತಿ ಕಾರ್ಯಾಚರಿಸಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈ ಸಮಿತಿಯ ಸದಸ್ಯರಾಗಿರುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.