ವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ಬಿ.ಸಿ.ಶಂಕರಯ್ಯ, ಪಿ.ಜಿ.ಸುಕುಮಾರ್ ಇತರರಿದ್ದರು.
- ಸಮಾಜ ಸುಧಾರಕರನ್ನು ಸದಾ ಸ್ಮರಿಸಿ: ಡಾ.ಮಂತರ್‌ಗೌಡ
ಮಡಿಕೇರಿ: ಮಡಿವಾಳ ಮಾಚಿದೇವರು ಸೇರಿದಂತೆ ಹಲವು ಸಮಾಜ ಸುಧಾರಕರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಡಿವಾಳ ಮಾಚಿದೇವರ ತತ್ವ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ. ಸಮಾನತೆಗಾಗಿ ೧೨ ನೇ ಶತಮಾನದದಲ್ಲಿ ಬಸವಾದಿ ಶರಣರು ಸೇರಿದಂತೆ ಹಲವರು ಶ್ರಮಿಸಿದ್ದಾರೆ. ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಶಾಲಾ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ(ಟ್ಯಾಕ್ಸಿ), ಸ್ವಯಂ ಉದ್ಯೋಗ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆಗಳಿದ್ದು, ಇವುಗಳನ್ನು ಬಳಸಿಕೊಂಡು ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಶಾಸಕರು ಸಲಹೆ ನೀಡಿದರು.
ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಮಾತನಾಡಿ, ಮಡಿವಾಳ ಮಾಚಿದೇವರು ೧೨ನೇ ಶತಮಾನದಲ್ಲಿ ನಾಡಿನಲ್ಲಿ ತಮ್ಮದೇ ಆದ ಕ್ರಾಂತಿ ಉಂಟು ಮಾಡಿದ್ದಾರೆ. ೧೨ನೇ ಶತಮಾನದಲ್ಲಿ ಬಸವಾದಿ ಶರಣರ ಜೊತೆ ಮಡಿವಾಳ ಮಾಚಿದೇವರು ತಮ್ಮ ವೃತ್ತಿಯನ್ನು ಗೌರವಿಸಿ ಸಮಾಜದಲ್ಲಿ ಎಲ್ಲರೂ ಸಮಾನರೂ ಎಂಬ ಸಂದೇಶ ಸಾರಿದ್ದಾರೆ ಎಂದು ಹೇಳಿದರು.
ಮಡಿವಾಳ ಮಾಚಿದೇವರ ವೈಚಾರಿಕತೆ, ವೈಜ್ಞಾನಿಕತೆ ಮೆಚ್ಚುವಂತದ್ದು, ಮಡಿವಾಳ ಮಾಚಿದೇವರ ವಚನಗಳು ಶ್ರೇಷ್ಠವಾಗಿದ್ದು, ಪ್ರತಿಯೊಂದು ವಚನಗಳು ಅರ್ಥಪೂರ್ಣವಾಗಿವೆ. ಮಡಿವಾಳ ಮಾಚಿದೇವರು ೧೨ ನೇ ಶತಮಾನದಲ್ಲಿ ವಚನಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ್ದಾರೆ ಎಂದು ನುಡಿದರು.
೧೨ನೇಯ ಶತಮಾನದಲ್ಲಿ ದುರ್ಬಲರ ಶೋ?ಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದು ಬಿ.ಸಿ.ಶಂಕರಯ್ಯ ಪ್ರತಿಪಾದಿಸಿದರು.
ಮಡಿವಾಳರ ಅಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಜಿ.ಸುಕುಮಾರ್ ಮಾತನಾಡಿದರು, ಪ್ರಮುಖರಾದ ಮಂಜುನಾಥ್, ತಹಶೀಲ್ದಾರರಾದ ಶ್ರೀಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಇತರರು ಇದ್ದರು.