ಸೋಮವಾರಪೇಟೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುತ್ತಿರುವ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕೋರ್ ಕಮಿಟಿ ಸಭೆಯಲ್ಲಿ ಸ್ವಯಂ ಸೇವಕರಿಗೆ ಮಾಹಿತಿ ನೀಡಲಾಯಿತು. ವಿಠಲ್, ಜೈಚಂತ್, ಹನುಮಂತಪ್ಪ ಇದ್ದರು.
ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕೋರ್ ಕಮಿಟಿ ಸಭೆ ಇಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಬುಧವಾರ ನಡೆಯಿತು.
ಸಭೆಯನ್ನು ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಉದ್ಘಾಟಿಸಿ ಮಾತನಾಡಿ, ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸ್ವಯಂ ಸೇವಕರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಶೌರ್ಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ವಿಪತ್ತು ಸಂದರ್ಭಗಳಲ್ಲಿ ಶೌರ್ಯ ಸ್ವಯಂ ಸೇವಕರ ಸೇವೆ ಸಮಾಜಕ್ಕೆ ಮಾದರಿಯಾಗಿದ್ದು, ಧೈರ್ಯ, ಶಿಸ್ತು ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಜೀವ ರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರ್ ಮಾತನಾಡಿ, ಘಟಕಗಳ ಕಾರ್ಯವೈಖರಿಯನ್ನು ವಿಮರ್ಶಿಸಿ, ಮುಂದಿನ ದಿನಗಳಲ್ಲಿ ವಿಪತ್ತು ಸಂದರ್ಭಗಳಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ಮಳೆಗಾಲದಲ್ಲಿ ಉಂಟಾಗುವ ಅನಾಹುತಗಳಿಗೆ ಶೀಘ್ರ ಸ್ಪಂದನೆ ನೀಡುವ ಉದ್ದೇಶದಿಂದ 15 ಜನ ಶೌರ್ಯ ಸ್ವಯಂಸೇವಕರ ತುರ್ತು ಸ್ಪಂದನಾ ಘಟಕವನ್ನು ರಚಿಸಿ ಜವಾಬ್ದಾರಿಗಳನ್ನು ಹಂಚಿಕೊಡಲಾಯಿತು.
ತಾಲೂಕು ಕ್ಷೇತ್ರ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜನಜಾಗೃತಿ ಮೇಲ್ವಿಚಾರಕ ಕೆ.ನಿತೇಶ್ ಮತ್ತಿತರರು ಇದ್ದರು.