ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಆವರಣದಲ್ಲಿ ಸರ್ಕಾರಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಪರಮೇಶ್ ಕುಮಾರ್, ಚಂದ್ರಶೇಖರ್, ವಸಂತ್ ಕುಮಾರ್ ಇದ್ದರು. 
ಕೊಡಗು

ಹೊನ್ನಮ್ಮನ ಕೆರೆ ಪರಿಸರ ಸ್ವಚ್ಛವಾಗಿಡಲು ಅಭಿಯಾನ

ಎಂ.ರವಿ
ಸೋಮವಾರಪೇಟೆ: ತಾಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಆವರಣದಲ್ಲಿ ಮಂಗಳವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಸೋಮವಾರಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿ, ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡು ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.
ಪರಮೇಶ್ ಕುಮಾರ್ ಮಾತನಾಡಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣವಾಗಿರುವ ಹೊನ್ನಮ್ಮನ ಕೆರೆಯ ಪರಿಸರವನ್ನು ಸ್ವಚ್ಛವಾಗಿ ಕಾಪಾಡುವ ಉದ್ದೇಶದಿಂದ ಅಭಿಯಾನ ನಡೆಸಲಾಯಿತು. ಕೆರೆ ಆವರಣದಲ್ಲಿದ್ದ ತ್ಯಾಜ್ಯ ಹಾಗೂ ಕಸವನ್ನು ತೆರವುಗೊಳಿಸಿ, ಪರಿಸರವನ್ನು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವೀರೇಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್‌ಕುಮಾರ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಎನ್‌ಆರ್‌ಎಲ್‌ಎಂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.