ಬಾಲ್ಯ ವಿವಾಹ ನಿಷೇಧದ ಕುರಿತು ಅರಿವು ಕಾರ್ಯಕ್ರಮವನ್ನು ಪ್ರಭಾವತಿ ಉದ್ಘಾಟಿಸಿದರು. ರೇವತಿ, ಮಮತ ಇತರರಿದ್ದರು. 
ಕೊಡಗು

ಮಕ್ಕಳು ಶಿಕ್ಷಣದ ಕಡೆ ಗಮನ ಹರಿಸಿ

ಆದರ್ಶ್. ಎಂ.ಕೆ.

ಪ್ರಮುಖ ಮುಖ್ಯಾಂಶಗಳು

  • ಮಕ್ಕಳು ಶಿಕ್ಷಣದ ಕಡೆ ಗಮನ ಹರಿಸಿ
ಮಡಿಕೇರಿ: ಮಕ್ಕಳು ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಶಿಕ್ಷಣದ ಕಡೆ ಮಾತ್ರ ಗಮನ ಹರಿಸಬೇಕು ಎಂದು ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಭಾವತಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಕೆ ವತಿಯಿಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ನಡೆದ ಬಾಲ್ಯ ವಿವಾಹ ನಿಷೇಧದ ಕುರಿತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ಓದುವ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗೆ ಒಳಗಾಗಬಾರದು. ಅಲ್ಲದೆ ಸಮಾಜದಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ಮಾತುಕತೆಯಾಗಲೀ ಒಡನಾಟವನ್ನು ಇಟ್ಟುಕೊಳ್ಳಬಾರದು ಎಂದ ಅವರು, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಆಕರ್ಷಣೆಗೆ ಒಳಗಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಶಾಲೆಗೆ ಹೋಗುವ ಮಕ್ಕಳ ಬಗ್ಗೆ ಅವರ ತಂದೆ, ತಾಯಿಗಳು, ಮಕ್ಕಳ ಆಗುಹೋಗುಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.
ಸಖಿ ಒನ್ ಸ್ಟಾಪ್ ಸೆಂಟರ್ ಕಾನೂನು ಸಲಹೆಗಾರರಾದ ರೇವತಿ ಮಾತನಾಡಿ, ಹೆಣ್ಣು ಮಕ್ಕಳು ಮದುವೆ ವಯಸ್ಸು ೧೮, ಗಂಡು ಮಕ್ಕಳು ೨೧ ವರ್ಷ ಪೂರ್ಣವಾಗುವವರೆಗೂ ಮದುವೆ ಆಗಬಾರದು. ಈ ವಯೋಮಾನದ ಒಳಗೆ ಮದುವೆಯಾದರೆ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಇದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಈ ಅಪರಾಧಕ್ಕೆ ಜೈಲು ಹಾಗೂ ದಂಡ ಸಹಿತ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಿಷನ್ ಸಂಯೋಜಕಿ ಮಮತ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡವೋ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಹೆಣ್ಣುಮಗಳನ್ನು ರಕ್ಷಿಸಿ ಶಿಕ್ಷಣವಂತರಾಗಿ ಮಾಡಬೇಕು. ಅಲ್ಲದೆ ಕಡಿಮೆ ಆಗುತ್ತಿರುವ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವುದು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದು ಇದರ ಮೂಲ ಉದ್ದೇಶವಾಗಿದೆ. ಪ್ರತಿ ಮನೆಯಿಂದ ಹೆಣ್ಣು ಮಕ್ಕಳ ರಕ್ಷಣೆ ಆಗಬೇಕು ಹಾಗೂ ಉತ್ತಮ ಶಿಕ್ಷಣವಂತರಾಗಿ ಮಾಡುವ ಕರ್ತವ್ಯ ಆಕೆಯ ಪೋಷಕರಾಗಿರುತ್ತದೆ ಮಕ್ಕಳ ಸಹಾಯವಾಣಿ ೧೦೯೮ ಹಾಗೂ ತುರ್ತುಸೇವೆ ೧೧೨ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆಯ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.