ಮಡಿಕೇರಿ ತಾಲೂಕಿನ ಮಕ್ಕಂದೂರಿನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು, ಶಿಕ್ಷಕರು, ಸಾರ್ವಜನಿಕರು ಇದ್ದರು.
- ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಅಗತ್ಯ
- ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಸವಿತಾ ಕೀರ್ತನ್
ಮಡಿಕೇರಿ: ಇಂದಿನ ವಿದ್ಯಾರ್ಥಿಗಳು ಮೊಬೈಲ್ ಮತ್ತು ದುಶ್ಚಟಗಳಿಗೆ ದಾಸರಾಗುತ್ತಿರುವ ದಿನಗಳಲ್ಲಿ ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಹೇಳಿದರು.
ಮಡಿಕೇರಿ ತಾಲೂಕಿನ ಮಕ್ಕಂದೂರಿನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳು ಗ್ರಂಥಾಲಯವನ್ನು ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳಬೇಕು. ಜತೆಗೆ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳಸಿಕೊಳ್ಳಲು ತಿಳಿಸಿದ ಅವರು, ಮಹಿಳೆಯರ ಮತ್ತು ಮಕ್ಕಳ ಮಾರಾಟದ ಕಾವಲು ಸಮಿತಿ, ಬಾಲ್ಯ ವಿವಾಹದ ದುಷ್ಪರಿಣಾಮ, ಬಾಲ ಗರ್ಭಿಣಿಯ ಅಪಾಯಕಾರಿ ಬೆಳವಣಿಗೆ ಕುರಿತು ಮಾಹಿತಿ ನೀಡಿದರು.
ಅಕ್ಕಪಡೆಯ ಬಗ್ಗೆ ಮಾತನಾಡಿ, ಅಕ್ಕಪಡೆ ಎಂಬುದು ಕರ್ನಾಟಕ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಹಾಗೂ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಒಂದು ವಿಶೇಷ ಯೋಜನೆಯಾಗಿದೆ. ಇದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಯೋಜನೆ ಜಾರಿಗೆ ಬಂದಿರುತ್ತದೆ. ಅಕ್ಕ ಪಡೆಯು ಸಾರ್ವಜನಿಕ ಸ್ಥಳಗಳಲ್ಲಿ(ಶಾಲಾ ಕಾಲೇಜು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ಪವಿತ್ರ ಸ್ಥಳಗಳು ಸೂಕ್ಷ್ಮ ಪ್ರದೇಶಗಳಲ್ಲಿ) ಗಸ್ತು ತಿರುಗಿ ದೌರ್ಜನ್ಯ ತಡೆಯಲು ಜಾಗೃತಿ ಮೂಡಿಸಲು ಮತ್ತು ಸಂಕಷ್ಟದಲ್ಲಿರುವವರಿಗೆ ತಕ್ಷಣ ಸಹಾಯ ಒದಗಿಸಲು ಮೀಸಲಾಗಿದೆ ಎಂದು ತಿಳಿಸಿದರು.
ಅಕ್ಕಪಡೆಯ ಮೂಲಕ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಕರೆಗಳಿಗೆ ತಕ್ಷಣ ಸ್ಪಂದಿಸಿ ಸಹಾಯ ಮಾಡಲಾಗುವುದು. ಸಾರ್ವಜನಿಕರು ತಕ್ಷಣ ಸಹಾಯಕ್ಕಾಗಿ ೧೧೨ ಸಹಾಯವಾಣಿಗೆ ಕರೆ ಮಾಡಬಹುದು. ಮಕ್ಕಳ ಸಹಾಯವಾಣಿ ೧೦೯೮ ಮಹಿಳಾ ಸಹಾಯವಾಣಿ ೧೮೧ ಕರೆ ಮಾಡಬಹುದು ಎಂದು ಮಾಹಿತಿ ತಿಳಿಸಿದರು.
ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕಿ ಮಮತ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಸಂಬಾಲ್ ಮತ್ತು ಸಾಮರ್ಥ್ಯ ಎಂಬ ಎರಡು ಉಪಯೋಜನೆಗಳಿದ್ದು, ಸಂಬಾಲ್‌ನಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಬೇಟಿ ಬಚಾವೋ ಬೇಟಿ ಪಡಾವೊ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಾಮರ್ಥ್ಯ ದಡಿಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮತ್ತು ಮಹಿಳೆಯರಿಗೆ ವೇತನ ನಷ್ಟ ಭರಿಸಲು ಹಾಗೂ ಪೌಷ್ಠಿಕ ಯುಕ್ತ ಆಹಾರ ಪಡೆಯಲು ಮಾತೃವಂದನಾ ಯೋಜನೆ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗಾಗಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಲ್ಲಾ ಕ್ಷೇತ್ರದಲ್ಲಿದಲ್ಲಿ ತಮ್ಮನ್ನು ತಾವು ಉತ್ತಮ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ನಾವು ಇಂದು ಹೆಣ್ಣು ಮಕ್ಕಳ ಜನನವನ್ನು ಪ್ರೋತ್ಸಾಹಿಸುದರೊಂದಿಗೆ, ಉತ್ತಮ ಶಿಕ್ಷಣವನ್ನು ನೀಡಬೇಕು. ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ವನ್ನು ಜಾರಿಗೆ ತಂದಿದ್ದೂ ಸೂಕ್ತರೀತಿಯಲ್ಲಿ ಸದುಪಯೋಗ ಪಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಮಕ್ಕಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಯಾನ ವಹಿಸಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಕಾರ್ತಿಕ್, ಮಕ್ಕಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ವಿಮಲಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಿಕಾ, ಗ್ರಾಮ ಪಂಚಾಯಿತಿ ಸದಸ್ಯರಾದ ಸುನಂದಾ, ಗಣೇಶ, ಶ್ಯಾಮ್ ಸುಬ್ಬಯ್ಯ, ಕವಿತ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.