ಬೆಂಗಳೂರಿನ ವಿಕಾಸಸೌಧದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿತ್ತು. ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರತ್ಯು ಇತರರು ಇದ್ದರು.
- ಶಾಸಕ ಎ.ಎಸ್.ಪೊನ್ನಣ್ಣ ತಾಕೀತು
- ಬೆಂಗಳೂರಿನ ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ
ನಾಪೋಕ್ಲು: ಬೆಂಗಳೂರಿನ ವಿಕಾಸಸೌಧದಲ್ಲಿ ಬುಧವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗಿತ್ತು.
ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿ ವಿಳಂಬ ಹಾಗೂ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಕಾವೇರಿ ನೀರಾವರಿ ನಿಗಮದಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಆರ್.ಡಿ.ಪಿ.ಆರ್ ಇಲಾಖೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲನಿಗಳ ರಸ್ತೆ ಅಭಿವೃದ್ಧಿ ಹಾಗೂ ನಿವೇಶನ ಹಂಚಿಕೆ ಹಾಗೂ ಕಾಲನಿಗಳ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮೂಲಸೌಕರ್ಯ ಕಾಮಗಾರಿಗಳನ್ನು ವಿಳಂಬ ಮಾಡದೆ, ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರತ್ಯು ಇತರರು ಇದ್ದರು.