ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಿ.ಎಸ್.ಸಂಜನಾ ಮಾತನಾಡಿದರು. ಎ.ಬಿ.ಅಪ್ಪಣ್ಣ, ಪ್ರಶಾಂತ್, ಜಾನ್ಸನ್, ಲೋಕೇಶ್ ಇತರರಿದ್ದರು.
- ಡಿ.ದೇವರಾಜ ಅರಸು ಜನ್ಮದಿನಾಚರಣೆ
ಗೋಣಿಕೊಪ್ಪ: ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮದಿನವನ್ನು ಪೊನ್ನಂಪೇಟೆ ಸಾಮರ್ಥ್ಯ ಸೌಧದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಆಚರಿಸಲಾಯಿತು.
ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಅವರು ದೇವರಾಜ ಅರಸು ಅವರ ಜೀವನ, ಸಾಧನೆ ಹಾಗೂ ಸಾಮಾಜಿಕ ಸುಧಾರಣೆಗಳ ಕುರಿತು ಉಪನ್ಯಾಸ ನೀಡಿದರು.
ಹಿಂದುಳಿದ ವರ್ಗಗಳ ಏಳಿಗೆ, ಸಾಮಾಜಿಕ ನ್ಯಾಯ ಹಾಗೂ ಸಮಾಜದ ದುರ್ಬಲ ವರ್ಗಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅರಸು ಅವರು ಕೈಗೊಂಡ ಮಹತ್ವದ ಕ್ರಮಗಳನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಎ.ಬಿ.ಅಪ್ಪಣ್ಣ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಶಾಂತ್ ಮತ್ತು ಜಾನ್ಸನ್, ವಿರಾಜಪೇಟೆ ತಾಲೂಕು ಪಂಚಾಯಿತಿ ಇಒ ರಾಜೇಶ್.ಕೆ.ಆರ್, ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್, ಸಹಾಯಕ ನಿರ್ದೇಶಕ(ಪಂ.ರಾಜ್) ಎಂ.ಡಿ.ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.