ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
- ಮಹನೀಯರ ಜನ್ಮ ದಿನಾಚರಣೆ ಆಚರಣೆಗೆ ನಿರ್ಧಾರ
ಮಡಿಕೇರಿ: ಏ.೫ ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ೧೧೯ನೇ ಮತ್ತು ಏ.೧೪ ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಏ.೧೪ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು. ನೀಟ್, ಸಿಇಟಿ ಹಾಗೆಯೇ ನಾಗರಿಕ ಸೇವೆ ಜೊತೆಗೆ ಕ್ರೀಡಾ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಇದರಿಂದ ಇತರರಿಗೂ ಪ್ರೇರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಇಬ್ಬರು ಮಹನೀಯರ ಜೀವನ ಸಂದೇಶವನ್ನು ತಿಳಿದುಕೊಳ್ಳುವಂತಾಗಬೇಕು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ಸವಲತ್ತುಗಳನ್ನು ವಿತರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್ ಮಾತನಾಡಿ, ವಿವಿಧ ಸಮಾಜದ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತಾಗಬೇಕು ಎಂದು ಕೋರಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ, ಪ್ರಮುಖರಾದ ಮೋಹನ್ ಮೌರ್ಯ, ಪಾಲಾಕ್ಷ, ಪಾಪು ಸಣ್ಣಯ್ಯ, ಗಾಯತ್ರಿ ನರಸಿಂಹ, ಪ್ರೇಮ ಕೃಷ್ಣಪ್ಪ, ಮಹದೇವ, ಎಚ್.ಎಲ್.ಕುಮಾರ, ಜಯಪ್ಪ ಹಾನಗಲ್ಲು, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ತಾ.ಪಂ.ಇಒಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.