ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಗರದ ಕೋಟೆ ಆವರಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಬಿ.ಪಿ.ರೇಖಾ, ಮಂಜುನಾಥ ರಾಮಣ್ಣ, ಎಚ್.ಆರ್.ರಮೇಶ್ ಇತರರಿದ್ದರು.
- ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಭೇಟಿ
ಮಡಿಕೇರಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಗರದ ಕೋಟೆ ಆವರಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು, ಭಾರತೀಯ ಪುರಾತತ್ವ ಇಲಾಖೆಯವರು ಜಾಗ ನೀಡಿದ್ದಲ್ಲಿ ಕೂಡಲೇ ಹೈಟೆಕ್ ಶೌಚಾಲಯ ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೆಟರ್ ಬಿ.ಪಿ.ರೇಖಾ ಮಾತನಾಡಿ, ನಗರದ ಕೋಟೆಯಲ್ಲಿರುವ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ವ್ಯಾಪ್ತಿಗೆ ಕೋಟೆ ಅರಮನೆ ನೀಡಿದ್ದಲ್ಲಿ ಅಭಿವೃದ್ಧಿ ಕೈಗೊಳ್ಳಬಹುದು. ಕೋಟೆ ಹಿಂಭಾಗ ಸೇರಿದಂತೆ ಆವರಣದಲ್ಲಿ ಕಾಡು ಬೆಳೆದಿದ್ದು, ಶುಚಿತ್ವವನ್ನು ಕಾಪಾಡಬೇಕಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಪುರಾತತ್ವ ಇಲಾಖೆಗೆ ವಹಿಸಿದರೆ ಕೆಲಸಗಳನ್ನು ನಿರ್ವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಕೋಟೆ ಅರಮನೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ೧೦ ಕೋಟಿ ರೂ. ಬಿಡುಗಡೆಯಾಗಿದ್ದು, ಅಭಿವೃದ್ಧಿ ಕೆಲಸಗಳು ನಡೆದಿದೆ. ಇದನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದಲ್ಲಿ, ಅಭಿವೃದ್ಧಿ ಕಾಮಗಾರಿಯನ್ನು ಭಾರತೀಯ ಪುರಾತತ್ವ ಇಲಾಖೆಯವರು ನಿರ್ವಹಿಸಿದ್ದು, ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವಂತಾಗಬೇಕು ಎಂದು ಮನವಿ ಮಾಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಮಂಜುನಾಥ ರಾಮಣ್ಣ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಎಂಜಿನಿಯರ್ ಹೇಮಂತ್ ಕುಮಾರ್ ಇತರರು ಇದ್ದರು.