ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಮಾಪ್ ಅಪ್ ದಿನದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಡಾ.ಸಹನಾ ಎಸ್.ಹಾದಿಮನಿ ಮಾತನಾಡಿದರು. ಡಾ.ನಂಜುಂಡಯ್ಯ, ಡಾ.ಶೈಲಜಾ ಇತರರಿದ್ದರು.
- ಆ.೧೦ ರಂದು ಜಂತುಹುಳು ನಿವಾರಣಾ ಕಾರ್ಯಕ್ರಮ
- ಜಿಲ್ಲೆಯಲ್ಲಿ ೧,೨೦,೮೭೪ ಮಕ್ಕಳಿಗೆ ಮಾತ್ರೆ ವಿತರಣೆ ಗುರಿ: ಡಾ.ಸಹನಾ ಎಸ್.ಹಾದಿಮನಿ
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಜಿಲ್ಲೆಯಲ್ಲಿ ಆ.೧೦ ರಂದು ನಡೆಯಲಿದ್ದು, ೧ ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಅಲ್ಪೆಂಡಝೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಮಾಪ್ ಅಪ್ ದಿನದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ವಿವಿಧ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯವಾಗಿದ್ದು, ಸಮಸ್ವಯದಿಂದ ಕಾರ್ಯ ನಿರ್ವಹಿಸುವಂತೆ ಕೋರಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಂತುಹುಳು ಇರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಆದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ೧ ರಿಂದ ೧೯ ವರ್ಷದ ಎಲ್ಲಾ ಮಕ್ಕಳು ಜಂತುಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು ಎಂದು ಕೋರಿದರು.
ಆ.೧೦ ರಂದು ಎಲ್ಲೆಡೆ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ(ಎನ್‌ಡಿಡಿ) ನಡೆಯಲಿದ್ದು, ಆ.೧೭ ರಂದು ಮಾಪ್ ಅಪ್ ದಿನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಯಲ್ಲಿ ಮಾತ್ರೆ ನೀಡಲಾಗುತ್ತದೆ. ೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಆಶಾ ಕಾರ್ಯಕರ್ತರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿ ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ೧-೫ ವರ್ಷದ ಮಕ್ಕಳಿಗೆ ಅರ್ಧ ಅಲ್ಪೆಂಡಜೋಲ್ ಮಾತ್ರೆ ಹಾಗೂ ೬-೧೯ ವರ್ಷದ ಮಕ್ಕಳಿಗೆ ಒಂದು ಅಲ್ಪೆಂಡಜೋಲ್ ಮಾತ್ರೆ ನೀಡಲಾಗುವುದು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ(ಎನ್‌ಡಿಡಿ) ಕೊಡಗು ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ೧,೨೦,೮೭೪ ಮಕ್ಕಳ ಗುರಿ ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು ೨೩,೬೩೪, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು ೯೫೫ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೯೬,೨೮೫ ಹಾಗೂ ಪದವಿ ಪೂರ್ವ ತರಗತಿ ಹಾಗೂ ಇತರೆ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರೆ ವಿತರಿಸಲಾಗುತ್ತದೆ ಎಂದರು.
ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ನಿರ್ದೇಶನದಂತೆ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಅಡ್ಡಪರಿಣಾಮದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತರು ಮತ್ತು ಶಿಕ್ಷಕರಿಗೆ ಮಾತ್ರೆ ವಿತರಣೆಯ ಬಗ್ಗೆ ತರಬೇತಿ ನೀಡಲಾಗಿದೆ. ಅಂಗನವಾಡಿಗಳಲ್ಲಿ ನೋಂದಾಯಿತ ಮತ್ತು ನೋಂದಾವಣೆ ಆಗದ ಮಕ್ಕಳಿಗೆ ಮತ್ತು ಶಾಲೆಯಿಂದ ಹೊರಗಿರುವ ಮಕ್ಕಳಿಗೆ ಅಂಗನವಾಡಿ ಕಾರ್ಯಕರ್ತೆಯರು ಎನ್‌ಡಿಡಿ ಮತ್ತು ಮಾಪ್-ಅಪ್ ದಿನ ಜೌಷಧಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಮಡಿಕೇರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುನಿಲ್, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಇಂದುಧರ್, ವಿರಾಜಪೇಟೆ ತಾಲ್ಲೂಕು ಅಧಿಕಾರಿ ಡಾ.ಯತಿರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಗಣಪತಿ, ಮಕ್ಕಳ ತಜ್ಞರಾದ ಡಾ.ರವಿಚಂದ್ರ, ಸಮುದಾಯ ವೈದ್ಯಕೀಯ ವಿಭಾಗದ ಡಾ.ಶರವಣ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಕಾರ್ಯಕ್ರಮ ವ್ಯವಸ್ಥಾಪಕರಾದ ದೇವರಾಜು, ಇತರರು ಇದ್ದರು.