ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಪಲ್ಟಿಯಾಗಿರುವುದು. 
ಕೊಡಗು

ಆಟೋ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯ

ಎಂ.ರವಿ
ಸಿದ್ದಾಪುರ: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂಜಲಗೆರೆ ಸಮೀಪ ಶನಿವಾರ ಓವರ್‌ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್‌ವೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಸಮೀಪದ ಹಿಂದಿನಕೇರಿ ನಿವಾಸಿ ಫಿರೋಜ್ (38) ಗಾಯಗೊಂಡವರು. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ರಸ್ತೆಯ ಬದಿಗೆ ಉರುಳಿ ಜಖಂಗೊಂಡಿದೆ. ಇದರಿಂದ ಚಾಲಕ ಫೀರೋಜ್ ಗಂಭೀರವಾಗಿ ಗಾಯಗೊಂಡಿದ್ದು, ಆಟೋದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳಿಗೆ ನೆರವು ನೀಡಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಯ ಕುರಿತು ಮಾಹಿತಿ ಪಡೆದ ಸಿದ್ದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪಘಾತದಿಂದ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.