ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್.ಜೆ.ಸೋಮಶೇಖರ್ ಅವರು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಭಿತ್ತಿಪತ್ರ ಬಿಡುಗಡೆ ಮಾಡಿದರು. ಲಿಂಗರಾಜ ದೊಡ್ಡಮನಿ, ಡಾ.ತಿಮ್ಮಯ್ಯ, ಪ್ರಸನ್ನ ಇತರರಿದ್ದರು.
- ಇಂದಿನಿಂದ ೯ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ
ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೯ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಏ.೨೩ ರಿಂದ ಮೇ.೨೨ ರವರೆಗೆ ನಡೆಯಲಿದ್ದು, ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿ, ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸುಗೊಳಿಸಬೇಕು ಎಂದರು.
ಜಾನುವಾರುಗಳು ರೈತರ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಜವಾಬ್ದಾರಿ ಎಲ್ಲರದ್ದಾಗಿದೆ. ಹೈನುಗಾರಿಕೆ ರೈತರ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದರು.
ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ ಅವರು ಮಾತನಾಡಿ ಜಾನುವಾರುಗಳಿಗೆ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕಿಸುವುದೊಂದೇ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ. ಕಾಲುಬಾಯಿ ರೋಗವು ಹಸು, ಎತ್ತು, ಹೋರಿ, ಎಮ್ಮೆಗೆ ತಗುಲುವ ಮಾರಕ ರೋಗವಾಗಿದ್ದು, ರೈತರ ಆರ್ಥಿಕ ನಷ್ಟ ಉಂಟು ಮಾಡಲಿದೆ. ಆದ್ದರಿಂದ ಜಾನುವಾರುಗಳ ರಕ್ಷಣೆ, ಸುರಕ್ಷತೆ ಬಗ್ಗೆ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವರ್ಷದಲ್ಲಿ ಎರಡು ಬಾರಿ ಜಾನುವಾರುಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೆ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ ೩ ರಿಂದ ೫ ವಾರದೊಳಗೆ ದನ ಹಾಗೂ ಎಮ್ಮೆಗಳಿಗೆ ಬೂಸ್ಟರ್ ಲಸಿಕೆ ಹಾಕಿಸಬೇಕು. ಗರ್ಭಧರಿಸಿದ ಹಸು ಹಾಗೂ ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪ್ರತೀ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಲಸಿಕೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸದ್ಯ ೯ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಸಂದರ್ಭದಲ್ಲಿ ದನ ಹಾಗೂ ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ೫೨,೯೮೫ ದನ ಹಾಗೂ ೨,೧೩೬ ಎಮ್ಮೆಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಲಿಂಗರಾಜ ದೊಡ್ಡಮನಿ ಹೇಳಿದರು.
ಜಿಲ್ಲೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ನಾಲ್ಕನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಜಿಲ್ಲೆಯಲ್ಲಿ ೫ ಸಂಚಾರಿ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಜಾನುವಾರುಗಳಿಗೆ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.
ಪಾಲಿ ಕ್ಲೀನಿಕ್‌ನ ಉಪ ನಿರ್ದೇಶಕ ಡಾ.ತಿಮ್ಮಯ್ಯ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ಪ್ರಸನ್ನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಜಶೇಖರ್, ಡಾ.ಲತಾ ಪ್ರಸನ್ನ, ಡಾ.ನವೀನ್, ಡಾ.ಶಿಂಧೆ, ಡಾ.ಚಂದ್ರಶೇಖರ್, ಡಾ.ವಿವೇಕ್ ಇತರರು ಇದ್ದರು.