ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕಾಗಿ ತೆರಳುವ ರಸ್ತೆಯ ಪಾದಚಾರಿ ಮಾರ್ಗ ಕುಸಿದಿರುವುದು 
ಕೊಡಗು

ಭಾರಿ ಮಳೆಗೆ ಪಾದಚಾರಿ ಮಾರ್ಗ ಕುಸಿತ

ಮಡಿಕೇರಿ:
ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕಾಗಿ ತೆರಳುವ ರಸ್ತೆಯ ಪಾದಚಾರಿ ಮಾರ್ಗ ಕುಸಿದಿದೆ. ಇದು ನಗರದ ಅತ್ಯಂತ ಜನನಿಭಿಡ ರಸ್ತೆಗಳಲ್ಲಿ ಒಂದಾಗಿದ್ದು, ಪಾದಚಾರಿ ಮಾರ್ಗದಿಂದ ರಸ್ತೆಯೂ ಕುಸಿತಕ್ಕೆ ಒಳಗಾಗುವ ಆತಂಕ ಎದುರಾಗಿದೆ. ಹಾಗಾಗಿ ಮುನ್ನೆಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಈ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಸೇರಿದಂತೆ ಇತರ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರು ಮತ್ತು ವಾಹನ ಸವಾರರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪರಿಸ್ಥಿತಿಯನ್ನು ಸಂಬAಧಪಟ್ಟ ಇಲಾಖೆಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿ ನಗರಸಭೆಯಿಂದ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ಪಾದಚಾರಿ ಮಾರ್ಗ ನಿರ್ಮಿಸಲಾಗಿತ್ತು.
"

ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಇನ್ನೂ 2 ದಿನ ಇದೇ ರೀತಿ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಾದಚಾರಿ ಮಾರ್ಗ ಕುಸಿತ ಆಗಿರುವ ರಸ್ತೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಮಾಡಲು ಸೂಚಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಬದಲಾವಣೆಗಳ ಬಗ್ಗೆ ಮಾಹಿತಿ ನೀಡಲಾಗುವುದು.

— ಡಾ. ಮಂತರ್ ಗೌಡ, ಮಡಿಕೇರಿ ಶಾಸಕ