ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ ೨.೦ ಯೋಜನೆಯನ್ನು ೨೦೨೮ ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಸಂಸದರಾದ ಯದುವೀರ್ ಮಾತನಾಡಿದರು.
- ಜಲ ಜೀವನ್ ಮಿಷನ್ ೨೦೨೮ರವರೆಗೂ ವಿಸ್ತರಣೆ
- ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ ೨.೦ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
ಮಡಿಕೇರಿ: ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ ೨.೦ ಯೋಜನೆಯನ್ನು ೨೦೨೮ ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಜೊತೆಗೆ ಜಲ ಮಹೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದರು ಸೂಚಿಸಿದರು.
ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ ೨.೦ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಲೋಪ ಉಂಟಾಗದಂತೆ ಎಚ್ಚರ ವಹಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದದಿಂದ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಜಲಜೀವನ್ ಮಿಷನ್ ಪ್ರಗತಿ ಮತ್ತು ಅನುಷ್ಠಾನ ಸಂಬಂಧ ಹಲವು ಸಲಹೆ ಮಾರ್ಗದರ್ಶನ ನೀಡಿದರು.
ಜಿ.ಪಂಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಕಾಲ ಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ. ಹಾಗೆಯೇ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಮಾತನಾಡಿ, ಜಲ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯ ೨೩ ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲು ಅನುಮತಿ ದೊರೆತಿದೆ. ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಎಸ್‌ವಿಎಸ್ ಕಾಮಗಾರಿಯನ್ನು ಘಟಕವಾರು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ೪೫೭ ಕಾಮಗಾರಿಗಳಲ್ಲಿ ೩೬೯ ಕಾಮಗಾರಿ ಪೂರ್ಣಗೊಂಡಿದ್ದು, ೮೬ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಎಂವಿಎಸ್ ಯೋಜನೆಯಡಿ ೮.೫೨ ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರು ಪೂರೈಕೆಗೆ ಕುಶಾಲನಗರ ತಾಲೂಕಿನ ೧೨ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಬಂಧಿಸಿದಂತೆ ಮಡಿಕೇರಿ ಉಪ ವಿಭಾಗ, ಸೋಮವಾರಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ, ಪೊನ್ನಂಪೇಟೆ ಮತ್ತು ವಿರಾಜಪೇಟೆ, ತಾಲ್ಲೂಕುಗಳನ್ನು ಗುರುತಿಸಲಾಗಿದ್ದು, ೫೩೩ ಜನ ವಸತಿ ಪ್ರದೇಶದಲ್ಲಿ ೧೨ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
೨೦೨೫-೨೬ನೇ ಸಾಲಿನ ಕ್ರೀಯಾ ಯೋಜನೆ ಕಾಮಗಾರಿಗಳ ಆರ್ಥಿಕ ಮತ್ತು ಬೌದ್ಧಿಕ ಪ್ರಗತಿ ಪರಿಶೀಲಿಸಿದಾಗ ಮಡಿಕೇರಿ ತಾಲೂಕಿನಲ್ಲಿ ೨೪ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ೩೫ ಲಕ್ಷ ರೂ. ವೆಚ್ಚ ಅಂದಾಜು ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕ ಸಂಬಂಧಿಸಿದಂತೆ ೩೬ ಶುದ್ದೀಕರಣ ಘಟಕಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ೨೭ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ೯ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು.
ಪಿವಿಟಿಜಿ, ಪಿ.ಎಂ.ಜನಮನ್ ಯೋಜನೆಯಡಿ ಜಿಲ್ಲೆಯಲ್ಲಿ ೮ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ ಒಂದು ಕಾಮಗಾರಿ ಪೂರ್ಣಗೊಂಡಿದೆ. ೬ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಕಾಮಗಾರಿಯನ್ನು ಪ್ರಾರಂಭವಾಗಿಲ್ಲ. ತಟ್ಟೆಕೆರೆಯಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಗ್ರಾ.ಪಂ.ಗೆ ಹಸ್ತಾಂತರಿಸಲಾಗಿದೆ. ೬ ಕಾಮಗಾರಿಗಳ ಕೊಳವೆ ಮಾರ್ಗ ಮತ್ತು ನಳ ಸಂಪರ್ಕ ಪೂರ್ಣಗೊಂಡಿದೆ. ಹಾಗೆಯೇ ಒಎಚ್‌ಟಿ ಕಾಮಗಾರಿಯು ಪ್ರಗತಿಯಲ್ಲಿದೆ. ಒಟ್ಟು ೩೭೪ ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿಗೆ ಮುಂದಾಗಲಾಗಿದೆ ಎಂದರು.
ಜವಾಹರ್ ನವೋದಯ ವಿದ್ಯಾಲಯಕ್ಕೆ ಕುಡಿಯುವ ನೀರು ಪೂರೈಕೆ ಸಂಬಂಧ ಇದೇ ಸಂದರ್ಭದಲ್ಲಿ ಚರ್ಚಿಸಲಾಗಿ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ನವೋದಯ ಶಾಲೆಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಕೂಟುಹೊಳೆಯಿಂದ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೂ ಪೂರೈಸುವಂತಾಗಬೇಕು ಎಂದು ಕೋರಲಾಗಿತ್ತು. ಆದರೆ, ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಪರಿಹಾರ ಮಾರ್ಗ ಕಂಡು ಕೊಳ್ಳುವ ಸಂಬಂಧ ಚರ್ಚೆ ನಡೆಯಿತು.
ಕುಡಿಯುವ ನೀರು ಪೂರೈಕೆಗಾಗಿ ನವೋದಯ ವಿದ್ಯಾ ಸಂಸ್ಥೆಯಿಂದ ೭೮ ಲಕ್ಷ ರೂ. ಬಿಡುಗಡೆಯಾಗಿದ್ದು, ಟೆಂಡರ್‌ನ್ನು ಸಹ ಆಹ್ವಾನಿಸಲಾಗಿತ್ತು ಎಂದು ಕುಡಿಯುವ ನೀರು ಮತ್ತು ನೈರ್ಮಲ ವಿಭಾಗದ ಎಂಜಿನಿಯರ್ ಭಾಸ್ಕರ್ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಎಚ್.ಆರ್.ರಮೇಶ್ ಮಾತನಾಡಿ, ಬೇಸಿಗೆ ಅವಧಿಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಈ ಸಂಬಂಧ ಮತ್ತೊಮ್ಮೆ ಸ್ಥಳ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದರು.
ನವೋದಯ ಶಾಲೆಯಲ್ಲಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೊಡ್ಡ ಮನಸ್ಸು ಮಾಡಬೇಕಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸಲಹೆ ಮಾಡಿದರು.
ನವೋದಯ ಶಾಲೆಯ ಪ್ರಾಂಶುಪಾಲರಾದ ಪ್ರಮೀಳಾ ಮಾತನಾಡಿ, ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತಾಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಅವರು ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ಪೂರೈಕೆಯಾಗುವ ನೀರನ್ನು ನವೋದಯ ಶಾಲೆಗೆ ನೀಡಲು ಕಷ್ಟವಾಗಲಿದೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.
ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿರೇಂದ್ರ, ಎಂಜಿನಿಯರ್‌ಗಳು ಇತರರು ಇದ್ದರು.