ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. 
ಕೊಡಗು

ಕನ್ನಡ ರಾಜ್ಯೋತ್ಸವ ಆಚರಣೆಗೆ ಕೈಜೋಡಿಸಿ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಮಡಿಕೇರಿ: ನ.೧ ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಜೋಡಿಸಬೇಕು. ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವಲ್ಲಿ ವಿವಿಧ ಇಲಾಖೆಗಳ ಸಂಘ ಸಂಸ್ಥೆಗಳು ಸಹ ಕೈಜೋಡಿಸುವಂತೆ ಮನವಿ ಮಾಡಿದರು.

ಮೆರವಣಿಗೆಯನ್ನು ನಗರದ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಿಂದ ಕಾಲೇಜು ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಮೆರವಣಿಗೆಯು ಅಂದು ಬೆಳಗ್ಗೆ ೭ ಗಂಟೆಗೆ ಆರಂಭಿಸಿ ೮ ಗಂಟೆಗೆ ತಲುಪಿ ಮಕ್ಕಳೆಲ್ಲ ಉಪಾಹಾರ ಸೇವಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೈಗಾರಿಕೆ, ನಗರಸಭೆ ಹೀಗೆ ವಿವಿಧ ಇಲಾಖೆಗಳು ಸ್ತಬ್ಧಚಿತ್ರ ನಿರ್ಮಿಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳ ಸಂಬಂಧ ಮಾಹಿತಿ ಒಳಗೊಂಡಿರಬೇಕು. ಮೆರವಣಿಗೆಯಲ್ಲಿ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ಪೊಲೀಸ್, ಎನ್‌ಸಿಸಿ, ಭಾರತ್ ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕ ದಳ ಇತರರು ಪಾಲ್ಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಡಿವೈಎಸ್‌ಪಿ, ಶಾಲಾ ಶಿಕ್ಷಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಧ್ವಜಾರೋಹಣ ಮತ್ತು ವೇದಿಕೆ ನಿರ್ಮಾಣ ಸಂಬಂಧ ಲೋಕೋಪಯೋಗಿ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆ ಎಂಜಿನಿಯರ್‌ಗಳು ಮತ್ತು ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು, ವಾಟರ್ ಪ್ರೆಫ್ ವೇದಿಕೆ ನಿರ್ಮಾಣ ಮಾಡಬೇಕು. ಗಣ್ಯರು, ಮಾಜಿ ಸೈನಿಕರು, ಪತ್ರಕರ್ತರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು. ಜೊತೆಗೆ ಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಪಥ ಸಂಚಲನ ಸಮಿತಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಸಮಿತಿಯವರು ಕರ್ನಾಟಕದ ಭವ್ಯತೆ ಬಿಂಭಿಸುವ ಮತ್ತು ಕನ್ನಡ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗೀತೆಗಳನ್ನು ಒಳಗೊಂಡ ಗುಣಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಮಿತಿ ಸದಸ್ಯರಿಗೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.

ಉಪಾಹಾರ ಸಮಿತಿಯವರು ವಿದ್ಯಾರ್ಥಿಗಳಿಗೆ ಉಪಾಹಾರ ವ್ಯವಸ್ಥೆ ಮಾಡಬೇಕು. ಆ ನಿಟ್ಟಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಮೆರವಣಿಗೆಗೆ ಪ್ರೌಢಶಾಲೆ ಹಂತದ ಮೇಲ್ಪಟ್ಟು ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಜಾನಪದ, ಸೇನೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಗೌರವಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಜತೆಗೆ ಹಾಜರಾತಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಡಿವೈಎಸ್‌ಪಿ ಸೂರಜ್ ಮಾತನಾಡಿ, ನಗರದ ಅಜ್ಜಮಾಡ ಬಿ.ದೇವಯ್ಯ ವೃತ್ತದಿಂದ ಮೆರವಣಿಗೆ ಆರಂಭಿಸುವುದು ಒಳ್ಳೆಯದು, ಜೊತೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ಮಾಡಿದರು.

ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಬಿಂದು ಮಾತನಾಡಿ, ಕನ್ನಡ ರಾಜ್ಯೋತ್ಸವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳನ್ನು ಆಹ್ವಾನಿಸಿ, ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಸ್ತಬ್ಧಚಿತ್ರ ನಿರ್ಮಾಣದಲ್ಲಿ ವಿವಿಧ ಇಲಾಖೆಗಳು ಶ್ರಮಿಸುತ್ತವೆ. ಆದ್ದರಿಂದ ಎಲ್ಲಾ ಇಲಾಖೆಗಳ ಸ್ತಬ್ಧಚಿತ್ರಗಳಿಗೂ ಪ್ರಶಂಸನ ಪತ್ರ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾಧಿಕಾರಿ ಸೋಮಶೇಖರ್, ವಿವಿಧ ಇಲಾಖೆಗಳು ಸ್ತಬ್ಧಚಿತ್ರ ನಿರ್ಮಾಣದಲ್ಲಿ ಶ್ರಮಿಸುತ್ತಾರೆ. ಆದ್ದರಿಂದ ಎಲ್ಲರಿಗೂ ಪ್ರೋತ್ಸಾಹ ನೀಡಬೇಕು. ಆ ನಿಟ್ಟಿನಲ್ಲಿ ಪ್ರಶಂಸನ ಪತ್ರ ನೀಡುವಂತೆ ಸಲಹೆ ನೀಡಿದರು.

ಪೊಲೀಸ್ ಇಲಾಖೆಯ ಆರ್.ಪಿ.ಐ ಗಣೇಶ್ ಮಾತನಾಡಿ, ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಪಥ ಸಂಚಲನ ಸಂಬಂಧ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ತಹಶೀಲ್ದಾರ್ ಶ್ರೀಧರ, ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿ ಸುಮಂಗಲ ಹಿರೇಮಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಅರಣ್ಯ ಇಲಾಖೆಯ ಶಿವಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.