ಸೋಮವಾರಪೇಟೆ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು. 
ಕೊಡಗು

ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರಾಮಾಣಿಕ ಸೇವೆ

ಲೋಕೇಶ್ ಮನು. ಡಿ
ಸೋಮವಾರಪೇಟೆ: ಕಡಿಮೆ ಸಂಭಾವನೆ ಇದ್ದರೂ ಹೆಚ್ಚಿನ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮಾಜದಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾದಿಂದ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಶ್ಲಾಘಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಪಟ್ಟಣದ ಕೊಡವ ಸಮಾಜದಲ್ಲಿ ಮಂಗಳವಾರ ಆಯೋಜಿಸಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಚಾಚೂ ತಪ್ಪದೆ ಮನೆಮನೆಗೆ ಪ್ರಾಮಾಣಿಕವಾಗಿ ತಲುಪಿಸುವ ಮಹತ್ತರ ಜವಾಬ್ದಾರಿಯೊಂದಿಗೆ ಮಕ್ಕಳ ಪೋಷಣೆಯಲ್ಲಿಯೂ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು ಎಂದಿಗೂ ಸಂಭಾವನೆ ವಿಚಾರದಲ್ಲಿ ಕೆಲಸವನ್ನು ಬಿಟ್ಟಿಲ್ಲ. ಇಂದಿಗೂ ತಮಗೆ ವಹಿಸಿದ ಜವಾಬ್ದಾರಿ ನಿರ್ವಹಿಸುತ್ತಾರೆ. ಇದು ಇತರರಿಗೆ ಮಾದರಿಯಾಗಬೇಕೆಂದರು. 2006ರಲ್ಲಿ ಮತದಾನ ಪಟ್ಟಿಯ ಪರಿಷ್ಕರಣೆ ಸಂದರ್ಭ ಚುನಾವಣಾ ಆಯೋಗದವರು ಸೂಚಿಸಿದ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರೇ ಶೇ.75ರಷ್ಟು ಪೂರ್ಣಗೊಳಿಸಿದ್ದಾರೆ ಎಂದರು.
ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕೊನೆಯ ಹಂತದ ಆರ್ಥಿಕ, ಸಾಮಾಜಿಕ ಸಮೀಕ್ಷೆಯಲ್ಲಿಯೂ ಪಾಲ್ಗೊಂಡಿರುವುದು ಶ್ಲಾಘನೀಯ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಅಂಗನವಾಡಿ ಮಕ್ಕಳ ಆರೈಕೆಯೊಂದಿಗೆ ಅನ್ಯ ಇಲಾಖೆಯ ಕೆಲಸ ಕಾರ್ಯಗಳನ್ನು ಯಾವುದೇ ಲೋಪದೋಷ ಇಲ್ಲದೆ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಜೀವನ ಭದ್ರತೆಗೆ ಮೇಲಧಿಕಾರಿಗಳು ಮತ್ತು ಇಲಾಖೆಯ ಮೂಲಕ ಮನವಿ ಮಾಡಲಾಗುವುದು ಎಂದರು.
ವೇದಿಕೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್, ಅಂಗನವಾಡಿಯ ಹಿರಿಯ ಕಾರ್ಯಕರ್ತೆಯರು ಇದ್ದರು.
ಅಂಗನಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಕಛೇರಿ ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.