ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕರು, ಉಪನ್ಯಾಸಕರ ಸಭೆ ನಡೆಯಿತು. ಕಾವೇರಪ್ಪ, ಜ್ಯೋತಿ, ರೈಮಂಡ್, ದಮಯಂತಿ ಇದ್ದರು.
ವಿರಾಜಪೇಟೆ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು.
ಕಾಲೇಜಿನಲ್ಲಿ ಇತ್ತಿಚೆಗೆ ಆಯೋಜಿಸಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಶಿಸ್ತು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆಗೂ, ಪಾಲಕರಿಗೂ ಕೀರ್ತಿ ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದು ಹೇಳಿದರು.
ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪಾಲಕರು ಆಗಿಂದಾಗ್ಗೆ ವಿದ್ಯಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಪಾಲಕರನ್ನು ಅಭಿನಂದಿಸಿದರು. ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ವಿದ್ಯಾರ್ಥಿ ವೇತನ ಹಾಗೂ ಇ ಬಯೋ ಮೆಟ್ರಿಕ್ ವ್ಯವಸ್ಥೆ ಬಗ್ಗೆ ತಿಳಿಸಿದರು. ಪಾಲಕರು, ಉಪನ್ಯಾಸಕರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ಸಂವಾದ ನಡೆಯಿತು. ಉಪನ್ಯಾಸಕರಾದ ರೈಮಂಡ್, ಸುಮಲತಾ, ದಮಯಂತಿ, ಕಾಂತಿ, ಪವಿತ್ರಾ ಕುಮಾರಿ, ತಿಮ್ಮಯ್ಯ ಉಪಸ್ಥಿತರಿದ್ದರು.