ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗೋಣಿಕೊಪ್ಪಲಿನ ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭಾ ಮಕ್ಕಳ ರಕ್ಷಣೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಹಾಗೂ ಯುವಜನರಲ್ಲಿ ಹೆಚ್ಚುತ್ತಿರುವ ಮಾದಕದ್ರವ್ಯ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.
ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಯಾವುದೇ ರೀತಿಯ ದೌರ್ಜನ್ಯ ಅಥವಾ ಕಿರುಕುಳ ಕಂಡುಬAದಲ್ಲಿ ತಕ್ಷಣ ಸಂಬAಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕು. ಕಾನೂನುಗಳ ದುರುಪಯೋಗ ಮಾಡದೆ, ನೈಜ ಪ್ರಕರಣಗಳಲ್ಲಿ ಮಾತ್ರ ದೂರು ದಾಖಲಿಸಬೇಕು ಎಂದರು
ಯುವಜನರಲ್ಲಿ ಹೆಚ್ಚುತ್ತಿರುವ ಮಾದಕದ್ರವ್ಯ ವ್ಯಸನದ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಡ್ರಗ್ಸ್ ಬಳಕೆ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದರಲ್ಲದೆ ಎನ್‌ಡಿಪಿಎಸ್ ಕಾಯ್ದೆಯ ಪ್ರಮುಖ ಅಂಶಗಳನ್ನು ವಿವರಿಸಿ, ಚಿಕ್ಕ ಪ್ರಮಾಣದ ಪ್ರಕರಣಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ, ವ್ಯಾಪಾರಿಕ ಪ್ರಮಾಣದ ಪ್ರಕರಣಗಳಲ್ಲಿ ಕನಿಷ್ಠ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಅವಕಾಶವಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಪ್ರಭಾವ, ಸ್ನೇಹಿತರ ಒತ್ತಡ, ಮಾನಸಿಕ ಒತ್ತಡಗಳು ಯುವಜನರನ್ನು ಮಾದಕ ವಸ್ತುಗಳತ್ತ ಸೆಳೆಯುತ್ತಿವೆ. ಸಮುದಾಯದ ಸಹಭಾಗಿತ್ವದಿಂದ ಇದನ್ನು ತಡೆಗಟ್ಟಬೇಕು. ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಕನಿಷ್ಠ ಎಂಟು ಗಂಟೆಗಳ ನಿದ್ರೆ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಯೋಗ ಮತ್ತು ಧ್ಯಾನವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಹೇಳಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪ್ರಶ್ನೆಗಳಿಗೆ ಉತ್ತರಿಸಿದರು.
ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿ ಡಾ. ಲೆಫ್ಟಿನೆಂಟ್ ಅಕ್ರಂ, ಎನ್‌ಎಸ್‌ಎಸ್ ಅಧಿಕಾರಿ ವಿಪ್ರಾ ನೀಲಮ್ಮ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.