ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಡಾ.ಎನ್.ವಿ.ಪ್ರಸಾದ್, ಆನಂದ್ ಪ್ರಕಾಶ್ ಮೀನಾ, ಎನ್.ಹೆಚ್.ಜಗನ್ನಾಥ್ ಇದ್ದರು.
ಮಡಿಕೇರಿ: ಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದರು.
ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿ, ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅಪಾಯ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಬಾರದ ರೀತಿಯಲ್ಲಿ ನೋಡಿಕೊಳ್ಳಬೇಕು. ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜ, ಯೂರಿಯ, ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದು ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವುದೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲಕ್ಕೆ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುಂಗಾರು ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಪಶುಸಂಗೋಪನೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಹಲವು ವಿಷಯಗಳ ಕುರಿತು ಮಾತನಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್.ಜಗನ್ನಾಥ್, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್, ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ, ವಿರಾಜಪೇಟೆ ತಾ.ಪಂ.ಇಒ ಕೆ.ಆರ್.ರಾಜೇಶ್, ಮಡಿಕೇರಿ ತಾ.ಪಂ.ಇಒ ಶೇಖರ್, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.