ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಪಶುವೈದ್ಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬೀದಿ ನಾಯಿಗಳ ಶಸ್ತ್ರಚಿಕಿತ್ಸಾ ಕೊಠಡಿಯನ್ನು ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಉದ್ಘಾಟಿಸಿ ಮಾತನಾಡಿದರು. ಲಿಂಗರಾಜ್, ಜಾಸಿಂ ಖಾನ್, ಆದಿಲ್ ಇದ್ದರು.
ಜನರು ಸಹಕರಿಸಲು ಪಪಂ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮನವಿ
ಸೋಮವಾರಪೇಟೆ: ಪಟ್ಟಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಹಾಗೂ ಅವುಗಳ ಸುರಕ್ಷತೆಗಾಗಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿ ನಾಯಿಗಳ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸಾ ಕಾರ್ಯಕ್ರಮ ಆರಂಭಿಸಲಾಗಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮನವಿ ಮಾಡಿದರು.
ಪಟ್ಟಣ ಪಂಚಾಯಿತಿ ವತಿಯಿಂದ ಪಶುವೈದ್ಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬಿದಿ ನಾಯಿಗಳ ಶಸ್ತ್ರಚಿಕಿತ್ಸಾ ಕೊಠಡಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ದೇಶದ ಸರ್ವೋಚ್ಛ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಿ, ಅಗತ್ಯ ಆರೈಕೆ ಬಳಿಕ ಮತ್ತೆ ಅದೇ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗುವುದು. ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದ್ದು, ಸಾರ್ವಜನಿಕರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜ್ ದೊಡ್ಡಮನಿ ಮಾತನಾಡಿ, ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹಾಗೂ ಅವುಗಳ ಅನಗತ್ಯ ಸಾವುಗಳನ್ನು ತಡೆಯುವ ಉದ್ದೇಶದಿಂದ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಸರ್ಕಾರದ ಮಾರ್ಗಸೂಚಿಯಂತೆ ಎನ್‌ಜಿಒಗಳ ಮೂಲಕ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಗಂಡು ನಾಯಿಗಳಿಗೆ ಮೂರು ದಿನ ಹಾಗೂ ಹೆಣ್ಣು ನಾಯಿಗಳಿಗೆ ಐದು ದಿನಗಳ ವೈದ್ಯಕೀಯ ಆರೈಕೆ ನೀಡಿದ ಬಳಿಕ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ ಮನೆಗಳಲ್ಲಿ ಸಾಕು ನಾಯಿಗಳನ್ನು ಹೊಂದಿರುವವರು ಕೂಡ ಉಚಿತವಾಗಿ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಸೌಲಭ್ಯವನ್ನು ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಭಿಯಂತರ ಹೇಮಂತ್‌ಕುಮಾರ್, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ದಫೇದಾರ ಆದಿಲ್ ಸೇರಿದಂತೆ ಹಲವು ಸಿಬ್ಬಂದಿಗಳು ಇದ್ದರು.