ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಭಾಗಮಂಡಲ ವಲಯ ಪ್ರೌಢಶಾಲಾ ವಿಭಾಗದ ಬಾಲಕರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳು. 
ಕೊಡಗು

ಕ್ರೀಡೆಯಿಂದ ಮನೋದೈಹಿಕ ಸದೃಢ ಸಾಧ್ಯ

ಎ. ಆರ್. ರಘುರಾಮ

ನಾಪೋಕ್ಲು :

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಪಿ.ಎಂ.ಸುಬ್ಬಯ್ಯ ಸಲಹೆ ನೀಡಿದರು.


ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಭಾಗಮಂಡಲ ವಲಯ ಪ್ರೌಢಶಾಲೆ ವಿಭಾಗದ ಬಾಲಕರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಯಶಸ್ಸು ಸಾಧಿಸಬೇಕು ಎಂದರು.
ಪ್ರಾಂಶುಪಾಲ ಕೆ.ಆರ್.ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯ. ಸೋಲು , ಗೆಲುವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ ಅಧ್ಯಕ್ಷ ಕುಟ್ಟೇಟಿರ ಕುಂಙಪ್ಪ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಗಣನೀಯವಾಗಿ ಇಳಿಕೆಯಾಗಿದೆ. ಇತ್ತೀಚೆಗೆ ಹಲವರು ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಮೊಬೈಲ್ ಬಳಕೆಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು ಎಂದರು. ಮುಖ್ಯಶಿಕ್ಷಕ ಸಿ.ಆರ್.ಲೋಕೇಶ್ ಮಾತನಾಡಿದರು.
ಭಾಗಮಂಡಲ ವಲಯದ ಅಟಲ್ ಬಿಹಾರಿ ವಾಜಪೇಯಿ ಶಾಲೆ, ಕಾವೇರಿ ಪ್ರೌಢಶಾಲೆ, ಅರುಣ ಪ್ರೌಢಶಾಲೆ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ, ಉದಯ ಪ್ರೌಢಶಾಲೆ ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ರಾಜರಾಜೇಶ್ವರಿ ವಿದ್ಯಾಸಂಸ್ಥೆ ಸಂಸ್ಥಾಪಕ ನಾಟೋಳಂಡ ವಿಜು ದೇವಯ್ಯ, ಮುಖ್ಯಶಿಕ್ಷಕ ಕುದುಪಜೆ ಕವನ್, ದೈಹಿಕ ಶಿಕ್ಷಣ ಶಿಕ್ಷಕ ಅಯ್ಯಪ್ಪ, ವಿವಿಧ ಪ್ರೌಢಶಾಲೆ ಶಿಕ್ಷಕರು ಪಾಲ್ಗೊಂಡಿದ್ದರು. ಶ್ರೀರಾಜರಾಜೇಶ್ವರಿ ವಿದ್ಯಾಸಂಸ್ಥೆ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಿತು.
ವಿಜೇತ ತಂಡಗಳ ವಿವರ
ಕಬಡ್ಡಿ ಪಂದ್ಯಾವಳಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ, ಖೋಖೋದಲ್ಲಿ ಚೇರಂಬಾಣೆಯ ಅರುಣ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ, ವಾಲಿಬಾಲ್ ಹಾಗೂ ಥ್ರೋಬಾಲ್‌ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡಗಳು ಜಯಗಳಿಸಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡವು.