ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಸಿದ್ದಾಪುರ ಟಿಂಬರ್ ಯೂನಿಯನ್ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ನಡೆಯಿತು.
- ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸೂಚನೆ
- ಟಿಂಬರ್ ಯೂನಿಯನ್ ಸದಸ್ಯರೊಂದಿಗೆ ಸಭೆ
ಸಿದ್ದಾಪುರ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿರುವ ಸಂಚಾರ ನಿಯಮಗಳ ಸಂಬಂಧ ಟಿಂಬರ್ ಯೂನಿಯನ್ ಸದಸ್ಯರೊಂದಿಗೆ ಶುಕ್ರವಾರ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸಭೆ ನಡೆಯಿತು.
ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮರಳು ಮತ್ತು ಮರದ ದಿಮ್ಮಿಗಳ ಸಾಗಣೆ ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಸಂಬಂಧಿಸಿದ ಆದೇಶವನ್ನು ವ್ಯಾಪಾರಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು. ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಲೋಡ್ ಸಾಗಿಸಬಾರದು, ರಸ್ತೆ ತಡೆ ಉಂಟಾಗುವ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸಬಾರದು ಹಾಗೂ ಎಲ್ಲ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಠಾಣಾಧಿಕಾರಿ ಮಂಜುನಾಥ್ ತಿಳಿಸಿದರು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಸಿದ್ದಾಪುರ ಟಿಂಬರ್ ಯೂನಿಯನ್ ಪದಾಧಿಕಾರಿಗಳು, ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.