ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಕೂಡಿಗೆ ಶಾಲೆಗೆ ವಿಲೀನಗೊಳಿಸಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
- ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಪ್ರತಿಭಟನೆ
ಮಡಿಕೇರಿ: ಕೆಪಿಎಸ್- ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಕೂಡಿಗೆ ಶಾಲೆಗೆ ವಿಲೀನಗೊಳಿಸಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಸಂಘಟನೆಯ ಪದಾಧಿಕಾರಿಯದ ಪೂರ್ಣಿಮಾ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಹೊರಗುತ್ತಿಗೆ ನೀಡಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನಾಗಿ ಪರಿವರ್ತಿಸುವ ಉನ್ನಾರವನ್ನು ಸರ್ಕಾರ ಮಾಡುತ್ತಿದೆ. ಪ್ರತಿಯೊಂದು ಕಿಲೋಮೀಟರ್ ವ್ಯಾಪ್ತಿಯ ಒಳಗೆ ಪ್ರಾಥಮಿಕ ಶಾಲೆ ಇರಬೇಕೆನ್ನುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಕಾಯ್ದೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಉಲ್ಲಂಘಿಸುತ್ತದೆ ಎಂದರು.
ಈಗಾಗಲೇ ರಾಜ್ಯದಲ್ಲಿ ೬೨ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ. ೭,೦೦೦ಕ್ಕೂ ಹೆಚ್ಚು ಏಕೋಪದ್ಯಾಯ ಶಾಲೆಗಳಿವೆ. ೨೩ ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆ ಕಟ್ಟಡಗಳು ದುರಸ್ತಿಯಾಗಬೇಕಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಸರ್ಕಾರಿ ಶಾಲೆಗಳು ಸೊರಗುವಂತೆ ಮಾಡಿ ಸರ್ಕಾರ ಹಿಂಭಾಗಲಿನಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆರೋಪಿಸಿದರು.
ಚಿಕ್ಕತ್ತೂರು ಗ್ರಾಮದ ಸರ್ಕಾರಿ ಶಾಲೆ ಉಳಿಸಿ ಸಮಿತಿಯ ಅಧ್ಯಕ್ಷ ಹರೀಶ್ ಮಾತನಾಡಿ, ಕೊಡಗಿನಂತಹ ಗುಡ್ಡಕಾಡು ಪ್ರದೇಶಕ್ಕೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಸರಿ ಹೊಂದುವುದಿಲ್ಲ. ಯಾವುದೇ ಕಾರಣಕ್ಕೂ ಈ ಯೋಜನೆ ಜಾರಿಯಾಗಲು ಬಿಡುವುದಿಲ್ಲ. ನಾವು ಓದಿದ್ದು ಇದೇ ಶಾಲೆಯಲ್ಲಿ. ನಮ್ಮ ಮಕ್ಕಳು ಇದೇ ಶಾಲೆಯಲ್ಲಿ ಓದುತ್ತಿದ್ದಾರೆ. ನಮ್ಮಂತಹ ನೂರಾರು ಜನಕ್ಕೆ ಈ ಶಾಲೆ ಶಿಕ್ಷಣ ಕೊಟ್ಟಿದೆ. ಸುಂದರನಗರ, ಚಿಕ್ಕತ್ತೂರು ಹಾಗೂ ಬಸವತ್ತೂರು ಗ್ರಾಮಗಳ ಮಕ್ಕಳು ಚಿಕ್ಕತೂರು ಶಾಲೆಯ ಮೇಲೆ ಅವಲಂಬಿತರಾಗಿದ್ದಾರೆ. ಹಾಗಾಗಿ ಈ ಶಾಲೆ ಉಳಿಸಿಕೊಳ್ಳಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಓ ರಾಜ್ಯ ಖಜಾಂಚಿಗಳಾದ ಸುಭಾಷ್ ಬೆಟ್ಟದ ಕೊಪ್ಪ, ಜಿಲ್ಲಾ ಸಂಚಾಲಕರಾದ ಸ್ವಾತಿ, ಗ್ರಾಮಸ್ಥರಾದ ಜ್ಯೋತಿ, ಶಿವಕುಮಾರ್, ರಮೇಶ್, ಶಶಿ, ಮಂಜುನಾಥ್, ಸುಮಿತ್ರ, ಪಾರ್ವತಿ, ಲಕ್ಷ್ಮಿ, ದೇವಿಕಾ, ಮಂಜುಳಾ, ಉಷಾ ಹಾಗೂ ಮುಂತಾದವರು ಭಾಗವಹಿಸಿದ್ದರು.