ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ಗೋರಕ್ಷಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ದುರ್ಗೇಶ್ ಭಜರಂಗಿ, ಮುಕುಂದ್, ರಾಜೀಶ್, ಅಜೀತ್ ಶೆಟ್ಟಿ ಇತರರಿದ್ದರು. 
ಕೊಡಗು

ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಪ್ರತಿಭಟನೆ

ಮಡಿಕೇರಿ: ಪರಿಷ್ಕರಣೆ ಮಾಡಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿತು.

ಜಿಲ್ಲಾ ಅಧ್ಯಕ್ಷ ಜಿ.ಕೆ.ದಿನೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಯೋಗೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಈ ಸಂದರ್ಭ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್‌ಗಳು, ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸೂಕ್ತ ವೇತನ ಮತ್ತು ಸೇವಾ ಭದ್ರತೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಹೊರಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ವಿಳಂಬವಿಲ್ಲದೆ ಜಾರಿಗೊಳಿಸಬೇಕು. ತಿಂಗಳಿಗೆ ಕನಿಷ್ಠ ರೂ.೩೬ ಸಾವಿರ ವೇತನ ನೀಡಬೇಕು. ಹೊರಗುತ್ತಿಗೆ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ಕಲ್ಪಿಸಿ, ಅವರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಖಾಯಂಗೊಳಿಸಬೇಕು ಹಾಗೂ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು. ಇದರೊಂದಿಗೆ ಪ್ರತಿ ತಿಂಗಳ ೫ನೇ ತಾರೀಖಿನೊಳಗೆ ವೇತನ ಪಾವತಿ, ಬಾಕಿ ವೇತನ ಬಿಡುಗಡೆ, ವಾರಕ್ಕೆ ಒಂದು ದಿನ ರಜೆ, ಕೆಲಸದ ಸಮಯ ನಿಗದಿ, ಅಪಘಾತ ಸಂದರ್ಭದಲ್ಲಿ ಚಿಕಿತ್ಸೆ ಮತ್ತು ಪರಿಹಾರ, ವೇತನ ಚೀಟಿ, ನೇಮಕಾತಿ ಆದೇಶ, ಗುರುತಿನ ಚೀಟಿ, ಸೇವಾ ಪ್ರಮಾಣಪತ್ರ, ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಹಾಸ್ಟೆಲ್ ಸಿಬ್ಬಂದಿ ಕಡಿತದ ಆದೇಶ ರದ್ದುಪಡಿಸಿ, ೫೦ ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿ ನೇಮಿಸುವ ಹಿಂದಿನ ವ್ಯವಸ್ಥೆ ಮುಂದುವರಿಸಬೇಕು. ಹೊರಗುತ್ತಿಗೆ ಅತಿಥಿ ಶಿಕ್ಷಕರಿಗೂ ಸೇವಾ ಭದ್ರತೆ ಹಾಗೂ ಕನಿಷ್ಠ ವೇತನ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು ಸೇರಿದಂತೆ ಒಟ್ಟು ೨೧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ವಾಣಿ, ಸಂತೋಷ, ಪಲ್ಲವಿ, ಶಾಮಲಾ, ಇಂದಿರಾ, ಜ್ಯೋತಿ, ಸುನಿತಾ, ಮಂಗಳ, ಜಯಮಾಲಾ, ವೇದಾವತಿ, ಸುನಿತಾ, ಚಿನ್ನಪ್ಪ, ಹರೀಶ, ರವಿ, ವಸಂತ್, ಸಂಘದ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಭಾಗವಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.