ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ರೈತ ಹೋರಾಟ ಸಮಿತಿ ಸಭೆಯಲ್ಲಿ ರೈತರು ಪಾಲ್ಗೊಂಡಿದ್ದರು.
- ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಮಾಹಿತಿ
ಸೋಮವಾರಪೇಟೆ: ಸಿ ಮತ್ತು ಡಿ ವರ್ಗದ ಭೂಮಿ ಸಮಸ್ಯೆ, 94 ಸಿ, ಸೆಕ್ಷನ್ 4 ಸೇರಿದಂತೆ ರೈತರು ಎದುರಿಸುತ್ತಿರುವ ಇತರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಜೂ.19ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹೇಳಿದರು.
ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರೈತ ಮುಖಂಡರು, ಗ್ರಾಮಾಭಿವೃದ್ಧಿ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿ ಮತ್ತು ಡಿ ಭೂಮಿ ಸಮಸ್ಯೆಯನ್ನು ಬಗೆಹರಿಸುವಂತೆ ಈ ಹಿಂದೆ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಜತೆಗೆ ಸೋಮವಾರಪೇಟೆ ತಾಲೂಕು ಬಂದ್ ಮಾಡಲಾಗಿತ್ತು. ನೂರಾರು ಮನವಿಯನ್ನು ಅಧಿಕಾರಿಗಳು, ಶಾಸಕರು, ಸಚಿವರು, ಸಂಸದರು, ಮುಖ್ಯಮಂತ್ರಿಗಳಿಗೂ ನೀಡಲಾಗಿದೆ. ಆದರೆ ಈವರೆಗೆ ಸಮಸ್ಯೆ ಬಗೆಹರಿದಿಲ್ಲ ಎಂದರು.
ಸಿ ಮತ್ತು ಡಿ ವರ್ಗದ ಭೂಮಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿಯೊಂದನ್ನು ಸರ್ಕಾರ ರಚಿಸಿದ್ದು ಸಮಿತಿ ವರದಿ ಸಲ್ಲಿಕೆಯ ಅವಧಿ ಮೇ 31ಕ್ಕೆ ಮುಕ್ತಾಯಗೊಂಡಿದೆ. ಆದರೆ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಇದರೊಂದಿಗೆ ಅರಣ್ಯ ಇಲಾಖೆಯವರು ಸೆಕ್ಷನ್ 4 ಹೆಸರಿನಲ್ಲಿ ರೈತರಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.
ರೈತರ ಅಳಿವು ಉಳಿವಿನ ಪ್ರಶ್ನೆಯಾಗಿರುವ ಈ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.
ರೈತ ಸಂಘದ ಉಪಾಧ್ಯಕ್ಷ ಜಿ.ಎಂ.ಹೂವಯ್ಯ, ರೈತ ಸಂಘದ ತಾಲೂಕು ಅಧ್ಯಕ್ಷ ಕೂತಿ ದಿನೇಶ್, ಹಿರಿಯ ಕಾಫಿ ಬೆಳೆಗಾರ ಅನಂತರಾಮ್ ಇತರರಿದ್ದರು.