ರಸ್ತೆತಡೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು. 
ಕೊಡಗು

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ರಾಜಣ್ಣ

ಸಿದ್ದಾಪುರ :

ಯಡೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕಾರ್ಮಿಕ ಅಣ್ಣಪ್ಪ(40) ಭಾನುವಾರ ರಾತ್ರಿ ಮೃತಪಟ್ಟರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಬಿಜೆಪಿ ನೇತೃತ್ವದಲ್ಲಿ ಸೋಮವಾರ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಮಾನವ ಕಾಡಾನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಅಮ್ಮತ್ತಿ ಒಂಟಿ ಅಂಗಡಿ ಗ್ರಾಮ ಬಳಿ ಐದು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರ ತಡೆದಿದ್ದರಿಂದ ಮೂರು ದಿಕ್ಕುಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೊಡಗಿನಲ್ಲಿ ನೂರಾರು ಕಾಡಾನೆಗಳು ಅರಣ್ಯದಿಂದ ಹೊರಬಂದು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದು, ಬೆಳೆ ಹಾನಿ ಜತೆಗೆ ಕಾರ್ಮಿಕರು ಹಾಗೂ ಬೆಳೆಗಾರರ ಜೀವಕ್ಕೂ ಅಪಾಯ ತಂದೊಡ್ಡಿವೆ. ಆನೆ ಕಂದಕ, ರೈಲ್ವೆ ಬ್ಯಾರಿಕೇಡ್ ಸೇರಿದಂತೆ ವಿವಿಧ ಯೋಜನೆಗಳಿಗೆ ನೂರಾರು ಕೋಟಿ ರೂ. ಘೋಷಣೆಯಾಗಿದ್ದರೂ ಸಮರ್ಪಕ ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
ರಾಜ್ಯ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ಕಾಡಾನೆಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸಮಸ್ಯೆ ತೀವ್ರವಾಗಿದ್ದು, ಸರ್ವಪಕ್ಷಗಳು, ಸಂಘ-ಸಂಸ್ಥೆಗಳು ಹಾಗೂ ಅಧಿಕಾರಿಗಳ ಸಭೆ ಕರೆದು ಸಮಗ್ರ ಕರಡು ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಅಟ್ಟುವ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಯಡೂರಿನ ಕಾರ್ಮಿಕ ಅಣ್ಣಪ್ಪ ಕಾಡಾನೆ ದಾಳಿಗೆ ಬಲಿಯಾಗಿದ್ದು, ಇಲಾಖೆ ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಹಲವು ವರ್ಷಗಳಿಂದ ಮಾನವ ಜೀವಹಾನಿ ಹಾಗೂ ಬೆಳೆ ನಷ್ಟವಾಗುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ಮಾತನಾಡಿ, ಕಾಡಾನೆ ನಿಯಂತ್ರಣಕ್ಕೆ ಇಲಾಖೆಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾಡಾನೆ ಕಾರ್ಯಾಚರಣೆ, ರೇಡಿಯೊ ಕಾಲರ್ ಅಳವಡಿಕೆ ಹಾಗೂ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಗುಂಪಿನಲ್ಲಿರುವ ಕಾಡಾನೆಗಳಿಗೆ ರೇಡಿಯೊ ಕಾಲರ್ ಅಳವಡಿಸುವುದು ಸಾಧ್ಯವಿಲ್ಲ. ಸರ್ವಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ತಕ್ಷಣ ಕಾಡಾನೆ ಸೆರೆ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬೇರೆರ ರಂಜಿ ನೇತೃತ್ವ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬಿಜೆಪಿ ಮಂಡಲ ಅಧ್ಯಕ್ಷರಾದ ಸುವೀನ್ ಗಣಪತಿ, ಕಿಲನ್ ಗಣಪತಿ ಮಾತನಾಡಿದರು. ಡಿಎಫ್‌ಒ ವಿನಿತಿ ಚೌಹಾನ್, ವಲಯ ಅರಣ್ಯಾಧಿಕಾರಿ ಶಿವರಾಂ, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಗ್ರಾಮಾಂತರ ಠಾಣಾಧಿಕಾರಿ ಎನ್.ಜಿ. ಲತಾ ಸೇರಿದಂತೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ, ವಿವಿಧ ಗ್ರಾಮಗಳ ಮುಖಂಡರು, ರೈತ ಸಂಘದ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿರಾಜಪೇಟೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.