ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು. 
ಕೊಡಗು

ಫೆ.೨೮ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಆದರ್ಶ್. ಎಂ.ಕೆ.

ಪ್ರಮುಖ ಮುಖ್ಯಾಂಶಗಳು

  • ಫೆ.೨೮ರಿಂದ ದ್ವಿತೀಯ ಪಿಯುಸಿ ಪರೀಕ್ಷೆ
  • ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್
ಮಡಿಕೇರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇದೇ ಫೆ.೨೮ ರಿಂದ ಮಾ.೧೭ ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಪರೀಕ್ಷಾ ಕೇಂದ್ರಗಳ ಚಲನವಲನ ಸಂಬಂಧಿಸಿದಂತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೈದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು. ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು, ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಶುಶ್ರೂಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ೫೨೫೫ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ ೪,೮೦೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ೨೫೦ ಖಾಸಗಿಯಾಗಿ ಹಾಗೂ ೧೯೬ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲಾ ವಿಭಾಗದಲ್ಲಿ ೧,೦೫೪ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ೨೬೦೩ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ೧೫೯೮ ವಿದ್ಯಾರ್ಥಿಗಳು ಒಟ್ಟು ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.
ಜಿಲ್ಲೆಯ ೧೮ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲೂಕಿನ ೫, ಸೋಮವಾರಪೇಟೆ ತಾಲೂಕಿನ ೮ ಮತ್ತು ವಿರಾಜಪೇಟೆ ತಾಲೂಕಿನ ೫ ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರಂಗಿ ನಾಗರಾಜು ಅವರು ಮಾತನಾಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.