ಸೋಮವಾರಪೇಟೆ ಎಸ್‌ಜೆಎಂ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ವಿರಕ್ತ ಮಠದ ಶ್ರೀನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಮಕ್ಕಳಿಗೆ ಪರೀಕ್ಷಾ ಸಿದ್ಧತೆ ಬಗ್ಗೆ ಸಲಹೆ ನೀಡಿದರು. ಮಾರಪ್ಪ, ರಾಣ, ಶಿವಕುಮಾರ್ ಇದ್ದರು.
ಸೋಮವಾರಪೇಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಮೊದಲ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವಿರಕ್ತ ಮಠದ ಶ್ರೀನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಇಲ್ಲಿನ ಎಸ್‌ಜೆಎಂ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪರೀಕ್ಷಾ ಸಿದ್ಧತೆಯ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಕರು ಮಾಡುವ ಪಾಠವನ್ನು ಗಮನದಿಂದ ಕೇಳಿ ಕಲಿಕೆಯಲ್ಲಿ ಮುನ್ನಡೆಯಬೇಕು, ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕಲಿಸಿಕೊಡುತ್ತವೆ ಎಂದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಿಂದ ದೂರವಿದ್ದು, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಸಮಯ ಸಿಕ್ಕಾಗ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನವೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಜೀವನದ ಮಹತ್ವದ ಹಂತವಾಗಿದ್ದು ಶ್ರಮಪಟ್ಟು ಓದಿ ಉತ್ತಮ ಫಲಿತಾಂಶ ಗಳಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರು ನೀಡುವ ಪಾಠಗಳನ್ನು ಗಮನದಿಂದ ಕಲಿಯಬೇಕು ಹಾಗೂ ಸಮಯವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎಚ್.ಮಾರಪ್ಪ, ಶಿಕ್ಷಕರಾದ ರಾಣಿ, ಶಿವಕುಮಾರ್, ಧನ್ಯ ಸುನಿಲ್, ಪೃಥ್ವಿ, ಪ್ರಕಾಶ್,ನೇತ್ರಾವತಿ ಇದ್ದರು.