ಕುಂದಾ ಗ್ರಾಮದ ಬಸವೇಶ್ವರ ನಗರ ಕಾಲನಿಯಲ್ಲಿ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಕಾಳೇಗೌಡ ಮಾತನಾಡಿದರು. 
ಕೊಡಗು

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ

ಗೋಣಿಕೊಪ್ಪ: ಬಾಲ್ಯ ವಿವಾಹ, ಫೋಕ್ಸೊ ಕಾಯ್ದೆ, ಮದ್ಯಪಾನ, ಧೂಮಪಾನ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂದು ಗೋಣಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಾಳೇಗೌಡ ಹಾಡಿ ನಿವಾಸಿಗಳಿಗೆ ಸಲಹೆ ನೀಡಿದರು.
ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಗ್ರಾಮದ ಬಸವೇಶ್ವರ ನಗರ ಕಾಲನಿಯಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ನಿವಾಸಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು. ಗ್ರಾಮದೊಳಗೆ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ಸಹಕಾರದಿಂದಲೇ ಅಪರಾಧ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಹಾಡಿ ಮುಖಂಡ ಗಪ್ಪು ಮಾತನಾಡಿ, ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರತಿದಿನ ಸುಮಾರು 7 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ತೀವ್ರವಾಗುತ್ತಿದ್ದು, ಕಳೆದ ವಾರ ಸುರಿದ ಮಳೆಯಿಂದ ಸೇತುವೆ ಮೇಲ್ಭಾಗದಲ್ಲಿ ನೀರು ಹರಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸಿದರು ಎಂದು ಹೇಳಿದರು.
ಮಳೆ ಸಂತ್ರಸ್ತರಿಗೆ ಅಗತ್ಯ ಪರಿಹಾರ ಕಿಟ್‌ಗಳನ್ನು ವಿತರಿಸುವ ಭರವಸೆಯನ್ನು ತಹಸೀಲ್ದಾರ್ ನೀಡಿದರಾದರೂ ಈವರೆಗೆ ಯಾವುದೇ ಕಿಟ್‌ಗಳು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಹಾಡಿಯ ನಿವಾಸಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.