ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಮುನೀರ್ ಅಹಮದ್, ವೆಂಕಟೇಶ ಪ್ರಸನ್ನ, ನವೀನ್ ಅಂಬೆಕಲ್ಲು, ನವೀನ್ ಕುಮಾರ್ ಇತರರಿದ್ದರು.
ಮಡಿಕೇರಿ: ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾರ್ಥಿ ಜೀವನವೇ ಸೂಕ್ತ ಸಮಯ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿ ಜೀವನ ಮಹತ್ತರ ಸಮಯವಾಗಿದೆ. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ವೆಂಕಟೇಶ ಪ್ರಸನ್ನ ಪಿ.ಕೆ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ಮೂಡಿಬಂದ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಸಹಾಯಕ ಪ್ರಾಧ್ಯಾಪಕ ಧನರಾಜ್ ಕುಮಾರ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕಿ ಡಾ.ಎಸ್.ಜಿ.ಚೈತ್ರ ಹಾಗೂ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ದೀಕ್ಷಿತಾ ವರ್ಕಾಡಿ, ಉಪನ್ಯಾಸಕಿ ಸುಪ್ರಿಯಾ, ಉಪನ್ಯಾಸಕ ಉದಯ್ ಕುಮಾರ್ ಹಾಗೂ ವಿದ್ಯಾರ್ಥಿಗಳಿದ್ದರು.