ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆಯ ಯೋಜನೆ ಅಡಿಯಲ್ಲಿ ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ 1,325 ಸಸಿಗಳನ್ನು ನೆಟ್ಟು ಸಂರಕ್ಷಿಸುವ ಕಾರ್ಯಕ್ರಮಕ್ಕೆ ಬಸವರಾಜ ಹೊರಟ್ಟಿ ಚಾಲನೆ ನೀಡಿದರು. ಡಾ. ಮೃತ್ಯುಂಜಯ ಶೆಟ್ಟರ, ಪ್ರೊ. ಅಶೋಕ ಸಂಗಪ್ಪ, ಆಲೂರ, ಕೃಷ್ಣಮೂರ್ತಿ ಮತ್ತಿತರರು ಇದ್ದರು.
ಉನ್ನತ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ್ಯ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣ ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗಬಾರದು. ಅದು ವ್ಯಕ್ತಿತ್ವ ವಿಕಸನ, ಸಮಾಜಮುಖಿ ಚಿಂತನೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜತೆಗೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವಂತ ಮಹಿಳೆಯರಿಂದ ಕುಟುಂಬ ಮತ್ತು ಸಮಾಜ ಸದೃಢವಾಗುತ್ತದೆ. ಇಂದಿನ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಅವರಿಗೆ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ಕೌಶಲ್ಯಗಳನ್ನು ಬೆಳೆಸಲು ಶಿಕ್ಷಣ ಸಂಸ್ಥೆಗಳು ಪೂರಕ ವಾತಾವರಣ ನಿರ್ಮಿಸಬೇಕು. ಪಾಲಕರು ಹೆಣ್ಣು-ಗಂಡು ಎಂಬ ಭೇದಭಾವವಿಲ್ಲದೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಮಾತನಾಡಿ ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯದ ಹಿರಿಯ ಶಿಕ್ಷಣ ತಜ್ಞ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿವ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆಯ ಯೋಜನೆ ಅಡಿಯಲ್ಲಿ ಬೈಫ್ ಸಂಸ್ಥೆಯು ರೈನ್ ಫಾರೆಸ್ಟ್ ಅಲೈಯನ್ಸ್ ಅವರ ಸಹಯೋಗದಲ್ಲಿ ಸಬಲ ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ 1,325 ಸಸಿಗಳನ್ನು ನೆಟ್ಟು ಸಂರಕ್ಷಿಸುವ ಕಾರ್ಯಕ್ರಮಕ್ಕೆ ಬಸವರಾಜ ಹೊರಟ್ಟಿ ಚಾಲನೆ ನೀಡಿದರು.
ಅಂತಾರಾಷ್ಟ್ರೀಯ ಹಿಂದೂಸ್ತಾನಿ ಗಾಯಕ ಡಾ. ಮೃತ್ಯುಂಜಯ ಶೆಟ್ಟರ ಇದೇ ವೇಳೆ ವಚನ ಗಾಯನ ನಡೆಸಿಕೊಟ್ಟರು.
ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ರಾಮಚಂದ್ರ ಮತ್ತು ಸಿಬ್ಬಂದಿ, ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹಮದ್, ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.