ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 
ಕೊಡಗು

ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಿ: ಚಿದಾನಂದ ಕುಮಾರ್

ಪ್ರಮುಖ ಮುಖ್ಯಾಂಶಗಳು

  • ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಿ: ಚಿದಾನಂದ ಕುಮಾರ್
ಮಡಿಕೇರಿ: ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ದೇಶಕ್ಕೆ ಯಶಸ್ವಿಯನ್ನು ತಂದು ಕೊಡಿ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಭಾಗವಹಿಸುವುದರ ಜತೆಗೆ ದೇಶಕ್ಕೆ ಯಶಸ್ವಿತರಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವೈ.ಚಿತ್ರಾ ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು.
ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಖಜಾಂಜಿ ವಿವಿಯನ್ ಅಂತೋಣಿ ಆಲ್ವಾರಿಸ್ ಮಾತನಾಡಿ, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರು ಎನ್.ಕೆ.ಜ್ಯೋತಿ ಮಾತನಾಡಿ, ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸುವುದು ತಂದೆ ತಾಯಿಗಳ ಕರ್ತವ್ಯ. ಗೌರವ ಆತ್ಮವಿಶ್ವಾಸ ಬೆಳೆಸುವುದು ಮಕ್ಕಳ ಕರ್ತವ್ಯ ಎಂದು ಹೇಳಿದರು.
ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ರೂಪಿಸುವುದು ಮತ್ತು ಜವಾಬ್ದಾರಿಯಿಂದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕೊ.ಜಿ.ಪ.ಪೂ.ಕಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಕೆ.ಸಿ.ಚಂದ್ರಶೇಖರ್, ಶಿವಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ, ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಉಪನ್ಯಾಸಕರು ಇತರರು ಇದ್ದರು.