ಕುಶಾಲನಗರ ಸಮೀಪದ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಏರ್ಪಡಿಸಿದ್ದ ವಾಸ್ತವ್ಯ ಬೇಸಿಗೆ ಶಿಬಿರವನ್ನು ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ ಉದ್ಘಾಟಿಸಿದರು. ಡಾ.ಪ್ರವೀಣ್ ದೇವರಗುಂಡ, ಸಿಸ್ಟರ್ ಅನಿತಾ, ಸಿಸ್ಟರ್ ಬೆನ್ ವಿಟಾ, ಸಿ.ಎಂ.ಸುಲೋಚನಾ, ಎಂ.ಎಸ್.ಗಣೇಶ್, ನರೇಶ್, ಡೈಸಿ, ವಸಂತ ಇತರರಿದ್ದರು.
ಕುಶಾಲನಗರ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಶಿಸ್ತು-ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಹೇಳಿದರು.
ಕುಶಾಲನಗರ ತಾಲ್ಲೂಕಿನ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಅಂಜೆಲಾ ವಿದ್ಯಾನಿಕೇತನ ಶಾಲೆಯ ಸಂಯುಕ್ತಾಶ್ರಯದಲ್ಲಿ ಶಾಲೆಯ ಕಬ್ಸ್ ಮತ್ತು ಬುಲ್ ಬುಲ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಭಾನುವಾರ ಏರ್ಪಡಿಸಿದ್ದ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಲು ತುಂಬ ಸಹಕಾರಿಯಾಗಿವೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬಾಲಕರು ಮತ್ತು ಬಾಲಕಿಯರಿಗಾಗಿ ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ ಶೈಕ್ಷಣಿಕ ಆಂದೋಲನವಾಗಿದ್ದು, ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನವಾಗಿ ಬದುಕುವ ಹಾಗೂ ಸಹಬಾಳ್ವೆ ಜೀವನ ನಡೆಸುವ ಸಂಸ್ಥೆಯಾಗಿ ರೂಪುಗೊಂಡಿದೆ ಎಂದರು.
ಎಲ್ಲ ಶಾಲೆಗಳಲ್ಲಿಯೂ ಸ್ಕೌಟ್ಸ್ ಮತ್ತು ಗೈಡ್ಸ್‌ನ ಚಟುವಟಿಕೆ ಪ್ರಾರಂಭಿಸಬೇಕು. ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಶಿಕ್ಷಕಿ ಬೆನ್‌ವಿಟಾ ಮಾತನಾಡಿ, ಶಾಲಾ ರಜಾದಿನಗಳಲ್ಲಿ ನಡೆಸುವ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪಠ್ಯ ಬೋಧನೆ ಮಾಡದೆ ಅವರ ಮನೋವಿಕಾಸಕ್ಕೆ ಪೂರಕವಾಗಿ ಪಠ್ಯೇತರ ಚಟುವಟಿಕೆಗಳನ್ನು ನಡೆಸಿದಾಗ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ಡಿಸೋಜಾ, ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ತರಬೇತಿ ಹೊಂದಿ ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ರಾಷ್ಟ್ರೀಯ ಭಾವೈಕ್ಯತೆಯನ್ನು ಎತ್ತಿ ಹಿಡಿಯಬೇಕು ಎಂದರು.
ಜಿಲ್ಲಾ ಗೈಡ್ಸ್‌ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ, ಸ್ಕೌಟಿಂಗ್, ಗೈಡಿಂಗ್‌ನ ಮೂಲತತ್ವ, ಧ್ಯೇಯ, ಕೌಶಲಗಳು, ಗ್ರಾಮೀಣ ವೃತ್ತಿ ಕೌಶಲಗಳು ಹಾಗೂ ನಾಯಕತ್ವ ಬೆಳವಣಿಗೆ ಸೇರಿದಂತೆ ಶಿಬಿರದಲ್ಲಿ ಮಕ್ಕಳಿಗೆ ಕಲಿಸುವ ವಿಚಾರಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆಯ ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಹಾಗೂ ಲೀಡರ್ಸ್ ತರಬೇತುದಾರ(ಎಲ್.ಟಿ)ರಾದ ಸಿಸ್ಟರ್ ಬೆನ್ ವಿಟಾ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ಸ್ ವಿಭಾಗದ ತರಬೇತಿ ಆಯುಕ್ತ ಕೆ.ಯು.ರಂಜಿತ್, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಡಿ.ವಿ.ಗಣೇಶ್, ಖಜಾಂಚಿ ಎನ್.ಎಸ್.ನರೇಶ್ ಕುಮಾರ್, ಸದಸ್ಯ ವಸಂತ, ಕಬ್ಸ್ ಮತ್ತು ಬುಲ್ ಬುಲ್ಸ್ ವಿಭಾಗದ ಕಮಿಷನರ್ ಡೈಸಿ ಫ್ರಾನ್ಸಿಸ್, ಗೈಡ್ ಕ್ಯಾಪ್ಟನ್ ಆಶಾ, ಸ್ಕೌಟ್ಸ್ ಮಾಸ್ಟರ್ ಎಸ್.ಎಚ್.ವಸಂತ, ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರಿಂದ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.