ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್‌ಗೌಡ ಮಾತನಾಡಿದರು. ಅಭಿಮನ್ಯುಕುಮಾರ್, ಕೃಷ್ಣಮೂರ್ತಿ, ಶಶಿಧರ್, ಕಾಂತರಾಜ್ ಇದ್ದರು.
ಸೋಮವಾರಪೇಟೆ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲೇ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ವ್ಯವಸ್ಥೆಯಾಗಿದ್ದು, ಇದರ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಪಟ್ಟಣದ ಕೊಡವ ಸಮಾಜದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದಿದ್ದರೆ ದೇಶದ ಜನರು ರಾಜಪ್ರಭುತ್ವದ ವ್ಯವಸ್ಥೆಯಲ್ಲಿ ಬದುಕಬೇಕಾಗುತ್ತಿತ್ತು. ಪ್ರಜೆಗಳಿಗೆ ಸಮಾನತೆ, ಸ್ವಾತಂತ್ರ್ಯ ಹಾಗೂ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಅವಕಾಶವನ್ನು ಸಂವಿಧಾನ ಕಲ್ಪಿಸಿದೆ. ಜಾತಿ, ಧರ್ಮ, ಭಾಷೆ ಸೇರಿದಂತೆ ಯಾವುದೇ ಭೇದ-ಭಾವವಿಲ್ಲದೆ ಎಲ್ಲರೂ ಸಮಾನವಾಗಿ ಬದುಕುವ ಹಕ್ಕನ್ನು ಪ್ರಜಾಪ್ರಭುತ್ವ ನೀಡಿದೆ. ಪ್ರಶ್ನಿಸುವ ಹಕ್ಕು, ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಹಾಗೂ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಜನರಿಗೆ ನೀಡಿರುವುದು ಪ್ರಜಾಪ್ರಭುತ್ವದ ಪ್ರಮುಖ ಶಕ್ತಿಯಾಗಿದೆ ಎಂದು ಹೇಳಿದರು.
ಯುವಜನತೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಂಡು, ವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಜಾಗೃತ ಪ್ರಜೆಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಚುನಾವಣಾ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಕ್ರಮಗಳನ್ನು ತೊಡೆದು ಹಾಕಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ದೊರೆಯುತ್ತದೆ. ಒಂದು ಮತ, ಒಂದು ಮೌಲ್ಯ ಎಂಬ ತತ್ವದಡಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು.
ಗ್ಯಾರಂಟಿ ಅನಷ್ಠಾನ ಸಮಿತಿ ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳು ಜನರ ಬದುಕಿಗೆ ದಾರಿದೀಪವಾಗಿದ್ದು, ಅವುಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ಪ್ರಜಾಪ್ರಭುತ್ವ ವಿರೋಧಿಗಳು ಇದನ್ನು ನಾಶಪಡಿಸಲು ಹೊಂಚುಹಾಕುತ್ತಿದ್ದಾರೆ. ಈ ಸಮಯದಲ್ಲಿ ಯುವಸಮುದಾಯ ಜಾಗೃತರಾಗಬೇಕು ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಯಪ್ಪ ಹಾನಗಲ್, ಗ್ಯಾರಂಟಿ ಸಮಿತಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕಾಂತರಾಜು, ಸೂಡ ಅಧ್ಯಕ್ಷ ಕೆ.ಎಂ.ಆದಂ, ತಹಸೀಲ್ದಾರ್ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಪ್ರಮುಖರಾದ ಬಿ.ಈ.ಜಯೇಂದ್ರ, ಟಿ.ಈ.ಸುರೇಶ್, ಡಿ.ಎಸ್.ನಿರ್ವಾಣಪ್ಪ, ಹೊನ್ನಪ್ಪ, ಮೊಹಿನಿ, ರುದ್ರಪ್ಪ, ಪುಟ್ಟರಾಜು, ಗುರುಸ್ವಾಮಿ ಇದ್ದರು. ವಿದ್ಯಾರ್ಥಿಗಳಿಗೆ ಇವಿಎಂ ಮೂಲಕ ಮತದಾನ ಬಗ್ಗೆ ಮಾಹಿತಿ ನೀಡಿ, ಮತದಾನ ಮಾಡಿಸಲಾಯಿತು.