ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಕುಶಾಲನಗರದಲ್ಲಿ ಮಹಿಳೆಯರಿಗೆ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ವನಿತಾ ಚಂದ್ರಮೋಹನ್ ಮಾತನಾಡಿದರು. ಲೀಲಾವತಿ, ಎಂ.ಎನ್. ಚಂದ್ರಮೋಹನ್, ನಾಗರಾಜ್, ಆಯಿಷ ಮತ್ತಿತರರು ಇದ್ದರು. 
ಕೊಡಗು

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ

ಕುಶಾಲನಗರ:
ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಕೊಡಗು ಜಿಲ್ಲಾ ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಕುಶಾಲನಗರದಲ್ಲಿ ಮಹಿಳೆಯರಿಗೆ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಬುಧವಾರ ಮಾತನಾಡಿದರು.
ಶಿಕ್ಷಣ ಕೇವಲ ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತವಾಗಬಾರದು. ವಯಸ್ಸಿನ ಅಂತರ ಗಮನಿಸದೇ, ಭ್ರಮೆಗಳನ್ನು ತೊರೆದು ಸ್ವಾವಲಂಬಿ ಬದುಕು ಕಾಣುವುದರೊಂದಿಗೆ ಪ್ರತಿಯೊಬ್ಬರೂ ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಿಳೆಯ ಸಾಮರ್ಥ್ಯ ಪ್ರತಿಭೆ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತಗೊಳ್ಳಬಾರದು. ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮವಾಗಿ ಕುಟುಂಬ ನಿರ್ವಹಣೆ ಮಾಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮೂಲಕ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಕಳೆದ ಹಲವು ವರ್ಷಗಳಿಂದ ಸ್ವಯಂ ಬದುಕು ರೂಪಿಸುವ ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಎಂ.ಎನ್. ಚಂದ್ರಮೋಹನ್ ಶಿಬಿರಾರ್ಥಿಗಳಿಗೆ ಶುಭ ಕೋರಿದರು.
ಮೂರು ತಿಂಗಳುಗಳ ಕಾಲ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ 30 ಮಹಿಳೆಯರು ಪಾಲ್ಗೊಂಡಿದ್ದರು. ಶಿಕ್ಷಕಿ ಆಯೀಶ ತರಬೇತಿ ನೀಡಿದ್ದು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶ್ರೀ ಕ್ಷೇತ್ರ ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕ ನಾಗರಾಜ್, ಒಕ್ಕೂಟದ ಪ್ರತಿನಿಧಿಗಳಾದ ಯಶೋಧ, ಲಲಿತ, ಸೇವಾ ಪ್ರತಿನಿಧಿ ಜಯಲಕ್ಷ್ಮಿ, ಸಮನ್ವಯಾಧಿಕಾರಿ ಕವನ, ತರಬೇತು ನೀಡಿದ ಶಿಕ್ಷಕಿ ಆಯಿಷ ಮತ್ತಿತರರು ಇದ್ದರು.