ಮಹಿಳಾ ಸಮಾಜದ ಸಭಾಂಗಣದಲ್ಲಿ ರಾಜೇಶ್ ಪದ್ಮನಾಭ ಅವರು ಕ್ರೀಡಾಕೂಟದ ಲಾಂಛನ ಬಿಡುಗಡೆಗೊಳಿಸಿದರು. ವಿನು ಶ್ರೀಜಿತ್, ರತನ್, ಗಿರಿಜಾ ಪ್ರೇಮ ಇತರರಿದ್ದರು. 
ಕೊಡಗು

ಇಂದಿನಿಂದ ಎರಡು ದಿನ ಕ್ರೀಡೋತ್ಸವ

ಪ್ರಮುಖ ಮುಖ್ಯಾಂಶಗಳು

  • ಗೋಣಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜನೆ
ಪೊನ್ನಂಪೇಟೆ: ವೀರ ಮಡಿವಾಳ ಜನಾಂಗದ ಬಾಂಧವರಿಗಾಗಿ ಆಯೋಜಿಸಲಾಗಿರುವ ಎರಡು ದಿನಗಳ ಕ್ರೀಡೋತ್ಸವ ಮೇ 9 ಮತ್ತು 10ರಂದು ಗೋಣಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ವೀರ ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಡಿ.ಪಿ.ರಾಜೇಶ್ ಪದ್ಮನಾಭ ತಿಳಿಸಿದರು.
ಮಹಿಳಾ ಸಮಾಜದ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.
ವೀರ ಮಡಿವಾಳ ಮಾಚಿದೇವ ಸಂಘದ ಆಶ್ರಯದಲ್ಲಿ ನಡೆಯಲಿರುವ ಈ ಕ್ರೀಡೋತ್ಸವದಲ್ಲಿ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ, ಮಕ್ಕಳ ಆಟೋಟಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿವೆ. ಜನಾಂಗದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಪರಸ್ಪರ ಸೌಹಾರ್ದ ಬೆಳೆಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 10 ತಂಡಗಳು ಪಾಲ್ಗೊಳ್ಳಲಿದ್ದು, ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ 6 ತಂಡಗಳು ಭಾಗವಹಿಸಲಿವೆ. ಮಕ್ಕಳಿಗಾಗಿ ಮನರಂಜನಾ ಆಟಗಳು ಮತ್ತು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮೇ 9ರಂದು ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ ಹಾಗೂ ಕೊಡವ ಮಡಿವಾಳ ಸಮಾಜದ ಅಧ್ಯಕ್ಷ ಪಾತಂಡ ರಂಜನ್ ಸಂತೋಷ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇ 10ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮೂಡುಬಿದರೆ ಕರಿಂಜಿ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷ ಸಿ.ನಂಜಪ್ಪ, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖ್ಯಮಂತ್ರಿ ಪದಕ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಎಂ.ಜೆ.ದಯಾನಂದ, ಜಿಲ್ಲಾ ಪೊಲೀಸ್ ಪ್ರಶಸ್ತಿ ಪುರಸ್ಕೃತ ಎಂ.ಡಿ.ಮನು ಕುಮಾರ್, ಇಂಜಿನಿಯರ್ ಸತೀಶ್, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸಂಧ್ಯಾ ವೀರಭದ್ರ ಹಾಗೂ ಅರಣ್ಯಾಧಿಕಾರಿ ಶೈಲಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜನಾಂಗದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕ್ರೀಡಾ ಸಮಿತಿಯ ಸಂಚಾಲಕರಾದ ವಿನು ಶ್ರೀಜಿತ್, ರತನ್, ಗಿರಿಜಾ ಪ್ರೇಮ, ಉಪಾಧ್ಯಕ್ಷರಾದ ಗಿರಿಜಾ ಕಾಶಿ, ಕೇಶವ, ಪ್ರಧಾನ ಕಾರ್ಯದರ್ಶಿ ಮಹದೇವ, ಪ್ರಚಾರ ಸಮಿತಿಯ ಅಧ್ಯಕ್ಷ ರವಿಕುಮಾರ್ ಹಾಗೂ ಪದಾಧಿಕಾರಿಗಳಾದ ಗಿರೀಶ್, ಸತೀಶ್, ರವಿ, ವೇಣು, ದೇವರಾಜ್ ಮತ್ತು ರಮ್ಯಾ ಗಣೇಶ್ ಉಪಸ್ಥಿತರಿದ್ದರು.