ವಿರಾಜಪೇಟೆಯ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ಎಸ್.ನಟರಾಜ್ ಮಾತನಾಡಿದರು. ಪ್ರವೀಣ್ ಕುಮಾರ್, ಬಸಪ್ಪ, ನಾಚಪ್ಪ ಇದ್ದರು.
- ನ್ಯಾಯಾಧೀಶ ಎಸ್.ನಟರಾಜ್ ಅಭಿಮತ
- ರಾಷ್ಟ್ರೀಯ ಮತದಾರರ ದಿನಾಚರಣೆ
ವಿರಾಜಪೇಟೆ: ಮತದಾನ ಸಂವಿಧಾನದ ಆತ್ಮವಿದ್ದಂತೆ ಎಂದು ವಿರಾಜಪೇಟೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಎಸ್.ನಟರಾಜ್ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ತಾಲೂಕು ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಧ್ಯೇಯ ಮತದಾರರಲ್ಲಿ ಜಾಗೃತಿ ಮೂಡಿಸುವುದು. ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಅತಿ ಮುಖ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಪ್ರಜಾಪ್ರಭುತ್ವವು ಯಶಸ್ವಿಯಾಗಬೇಕಾದರೆ ಮತದಾರರು ಜಾಗೃತರಾಗಬೇಕು. ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು.
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳ ತಹಸೀಲ್ದಾರ್ ಪ್ರವೀಣ್ ಕುಮಾರ್ ಅವರು ಮತದಾರರ ದಿನಾಚರಣೆಯ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಿದರು. ಹೊಸ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.
ನಗರಾಭಿವೃದ್ಧಿ ಯೋಜನಾಧಿಕಾರಿ ಬಸಪ್ಪ, ವಿರಾಜಪೇಟೆ ಪುರಸಭಾ ಅಧಿಕಾರಿ ನಾಚಪ್ಪ, ಕಂದಾಯ ಇಲಾಖೆಯ ಅಧಿಕಾರಿಗಳು, ವಿರಾಜಪೇಟೆ ತಾಲೂಕು ಕಚೇರಿಯ ಸಿಬ್ಬಂದಿ, ಪುರಸಭಾ ಸಿಬ್ಬಂದಿ, ಪೋಲಿಸ್ ಇಲಾಖೆಯ ಸಿಬ್ಬಂದಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು.