ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ  
ಕೊಡಗು

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಸಿದ್ದಾಪುರ:

ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ ಶಿಲ್ಪಿ ಕಾಫಿ ತೋಟದಲ್ಲಿ ಸೋಮವಾರ ಕಾಡಾನೆ ದಾಳಿಗೆ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಪುರುಲಿಯಾ ಮೂಲದ ಗೋಪಾಲ್ ಬಾವೂರಿ (44) ಮೃತಪಟ್ಟಿದ್ದು, ಜಾದವ್ (26) ಗಂಭೀರವಾಗಿ ಗಾಯಗೊಂಡು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾಫಿ ತೋಟದಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅರಣ್ಯದಂಚಿನಿಂದ ಬಂದ ಕಾಡಾನೆ ಏಕಾಏಕಿ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಇದರಿಂದ ಆತಂಕಗೊಂಡ ಕಾರ್ಮಿಕರು ದಿಕ್ಕಾಪಾಲಾಗಿ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಡಿಆರ್‌ಎಫ್‌ಒಗಳಾದ ದೇವರಾಜ್, ರಾಘವ, ಪ್ರಶಾಂತ್ ಹಾಗೂ ಉಮೇಶ್, ಚೆನ್ನಂಗಿ ಶಾಖೆಯ ಡಿಆರ್‌ಎಫ್‌ಒ ಶಶಿ, ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಹಾಗೂ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ದಿನನಿತ್ಯ ಕಾಡಾನೆಗಳು ಬೀಡುಬಿಡುತ್ತಿದ್ದು, ಶಾಶ್ವತವಾಗಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದ ಕಾರ್ಮಿಕರು, ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಲು ಬಿಡದೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಠಾಣಾಧಿಕಾರಿ ಈ.ಮಂಜುನಾಥ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಬಳಿಕ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಅವಕಾಶ ಮಾಡಿಕೊಡಲಾಯಿತು. ಸಿದ್ದಾಪುರ ಆಸ್ಪತ್ರೆಗೆ ಮೃತದೇಹ ತರಲಾಗುತ್ತಿದ್ದಂತೆ ಸ್ಥಳೀಯರು ಹಾಗೂ ಕಾರ್ಮಿಕ ಸಂಘಟನೆಗಳ ಪ್ರಮುಖರು ಅರಣ್ಯ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘಟನೆ ಮುಖಂಡ ಪಿ.ಆರ್.ಭರತ್ ಮಾತನಾಡಿ, ಕಾಡುಪ್ರಾಣಿಗಳ ಹಾವಳಿಯಿಂದ ಕೊಡಗಿನ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ. ಕಾಡುಪ್ರಾಣಿಗಳ ಹಾವಳಿಯನ್ನು ವೈಜ್ಞಾನಿಕ ರೀತಿಯಲ್ಲಿ ಶಾಶ್ವತವಾಗಿ ತಡೆಗಟ್ಟಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.